ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್ಡಿಎ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕೆಂಬ ಉದ್ದೇಶವಿದೆ: ಎಚ್.ಡಿ. ದೇವೇಗೌಡ

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಹಾಗೂ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಎನ್ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕೆಂಬ ಉದ್ದೇಶವಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂಗಿತ ವ್ಯಕ್ತಪಡಿಸಿದ್ದಾರೆ.
ಬುಧವಾರ ಜೆ.ಪಿ. ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ಪ್ರಾದೇಶಿಕ ಪಕ್ಷ. ಬಿಜೆಪಿ ರಾಷ್ಟ್ರೀಯ ಪಕ್ಷ. ಅವರು ಚುನಾವಣಾ ಪೂರ್ವ ಹೊಂದಾಣಿಕೆ ಕುರಿತಂತೆ ಯಾವ ತೀರ್ಮಾನ ಮಾಡಿದ್ದಾರೆಂದು ಕಾದುನೋಡಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ ಎಂದರು.
‘ಜೆಡಿಎಸ್ನಲ್ಲಿ ಕುಟುಂಬದವರನ್ನು ಹೊರತುಪಡಿಸಿ ಬೇರೆಯವರಿಗೆ ಹುದ್ದೆ ಕೊಡುವುದಿಲ್ಲ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯರ ಆರೋಪದಲ್ಲಿ ಹುರುಳಿಲ್ಲ. ನನಗೆ ಇನ್ನೂ ನೆನಪಿನ ಶಕ್ತಿ ಇದೆ. ಪ್ರತಿಯೊಂದಕ್ಕೂ ಸಮಯ ಬಂದಾಗ ಪ್ರತಿಕ್ರಿಯಿಸುತ್ತೇನೆ ಎಂದ ಅವರು, ವಿಜಯಪುರದಲ್ಲಿ ಫೆ.27ರಂದು ಜೆಡಿಎಸ್ ಸಮಾವೇಶ ನಡೆಸಲಾಗುತ್ತದೆ. ಆ ಸಮಾವೇಶದಲ್ಲಿ ಪಾಲ್ಗೊಳ್ಳಲು ನನಗೂ ಆಹ್ವಾನ ನೀಡಿದ್ದಾರೆ ಎಂದರು.




