SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ | ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ಸೋಮವಾರ ದಿಲ್ಲಿಯಲ್ಲಿ ಕೇಂದ್ರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ದೂರು ನೀಡಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಶನಿವಾರ ಜೆ.ಪಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಆಗಿರುವ ಮತದಾರ ಪಟ್ಟಿಯ ತೀವ್ರ ಪರಿಷ್ಕರಣೆಯ ಎಲ್ಲ ಪ್ರಕ್ರಿಯೆಗಳನ್ನು ರದ್ದು ಮಾಡಬೇಕು ಹಾಗೂ ಹೊರ ರಾಜ್ಯದ ದಕ್ಷ ಅಧಿಕಾರಿಯನ್ನು ರಾಜ್ಯದ ಎಸ್ಐಆರ್ ಉಸ್ತುವಾರಿಯನ್ನಾಗಿ ನೇಮಕ ಮಾಡಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಕೋರಲಾಗುವುದು ಎಂದು ಹೇಳಿದರು.
ಎಸ್ಐಆರ್ ನಲ್ಲಿ ಮಿತಿಮೀರಿದ ಅಕ್ರಮಗಳು ನಡೆಯುತ್ತಿವೆ. ಅದಕ್ಕೆ ರಾಜ್ಯ ಸರಕಾರ ಇಡೀ ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಇಲ್ಲಿ ನಡೆಯುತ್ತಿರುವ ಎಸ್ಐಆರ್ ಗೆ ಯಾವುದೇ ಅರ್ಥವಿಲ್ಲ. ಈಗಾಗಲೇ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಕೇಂದ್ರ ಚುನಾವಣಾ ಆಯುಕ್ತರಿಗೂ ದೂರು ಕಳುಹಿಸಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.
ಕೇಂದ್ರ ಚುನಾವಣಾ ಆಯೋಗದಿಂದ ಏನು ನಿರ್ದೇಶನ ಬರುತ್ತದೆಯೋ ಅದೇ ರೀತಿಯಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ. ಎಸ್ಐಆರ್ ನಲ್ಲಿ ಅಕ್ರಮ, ಅನ್ಯಾಯಗಳು ನಡೆಯುತ್ತಿದ್ದರೂ ರಾಜ್ಯ ಸರಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವರು ಈ ಬಗ್ಗೆ ಯಾಕೆ ಮೌನವಾಗಿದ್ದಾರೆ ಎಂದು ಅವರು ಪ್ರಶ್ನಿಸಿದರು.
ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಬೀದಿ ಬದಿ ವ್ಯಾಪಾರದ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಒಪ್ಪಿಕೊಳ್ಳೋಣ. ಆದರೆ ಇವರು ಪಾದಚಾರಿ ಮಾರ್ಗಗಳನ್ನು ತೆರವು ಮಾಡಿ ಬೀದಿಬದಿಯಲ್ಲಿ ಬದುಕು ಕಟ್ಟಿಕೊಂಡವರನ್ನು ಪುನಃ ಬೀದಿಗೆ ತಳ್ಳುತ್ತಿದ್ದಾರೆ. ಕೊನೆ ಪಕ್ಷ ಅವರ ಬದುಕಿಗೆ ಏನಾದರೂ ಪರ್ಯಾಯ ವ್ಯವಸ್ಥೆ ಮಾಡುವ ಬಗ್ಗೆ ಸರಕಾರ ಚಿಂತನೆ ಮಾಡಬೇಕಿತ್ತು ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಬೆಂಗಳೂರಿನಲ್ಲಿ ಲಕ್ಷಾಂತರ ಕುಟುಂಬಗಳು ಬೀದಿ ಬದಿಯಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ಮಾಡುತ್ತಿವೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ತೆರವುಗೊಳಿಸಿ, ಆದರೆ ಜನರ ಪ್ರಾಣ ಉಳಿಸುವುದು ಸರಕಾರದ ಕರ್ತವ್ಯ ಅಲ್ಲವೇ? ಅವರ ಮುಂದಿನ ಬದುಕಿಗೆ ದಾರಿಯೇನು? ಅವರಿಗಾಗಿ ಏನಾದರೂ ಪರಿಹಾರೋಪಾಯ ರೂಪಿಸುವುದು ಸರಕಾರದ ಜವಾಬ್ದಾರಿ. ಬಡ ಜನರ ಬದುಕನ್ನು ಕಿತ್ತುಕೊಂಡು ಅವರನ್ನು ಎಲ್ಲಿಗೆ ಕಳಿಸುತ್ತೀರಿ? ಎಂದು ಅವರು ಪ್ರಶ್ನಿಸಿದರು.
ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದಿದೆಯಲ್ಲ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಒಂದು ತಿಂಗಳಲ್ಲಿ ಏನು ಸಾಧನೆಯಾಗಿದೆ, ಬರಿ ಘೋಷಣೆ ಮಾಡಿದ್ದಾರೆ ಅಷ್ಟೇ. 76 ಸಾವಿರ ನೇಮಕಾತಿಗಳನ್ನು ಭರ್ತಿ ಮಾಡುತ್ತೇವೆ ಎಂದರು, ಎಲ್ಲಿ ಮಾಡಿದ್ದಾರೆ, ಘೋಷಣೆ ಮಾಡಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ ಎಂದು ಟೀಕಿಸಿದರು.
ಭಾರತ್ ಜೋಡೋ ತಂಡಗಳಿಗೆ ತಲಾ 10 ಲಕ್ಷ ರೂ.ಕೊಡುತ್ತೇವೆ ಎಂದು ಹೇಳಿದ್ದಾರೆ. ಆ ದುಡ್ಡನ್ನು ಎಲ್ಲಿಂದ ತರುತ್ತಾರೆ? ಸರಕಾರ ಹಾಗೂ ಜನರ ತೆರಿಗೆ ಹಣವನ್ನು ಕಾರ್ಯಕರ್ತರಿಗೆ ಹಂಚಿಕೊಂಡು ಉಡಾಯಿಸುತ್ತಿದ್ದಾರೆ. ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ತರುತ್ತೇವೆ ಎಂದು ಹೇಳಿಕೊಂಡು ದುಡ್ಡು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್. ಎಚ್.ಎಸ್.ಶಿವಶಂಕರ್, ರಾಜಾ ವೆಂಕಟಪ್ಪ ನಾಯಕ, ಎಚ್.ಎಂ. ರಮೇಶ್ ಗೌಡ ಮುಂತಾದವರು ಉಪಸ್ತಿತರಿದ್ದರು.






