ಅಲ್ಪಸಂಖ್ಯಾತರು, ದಲಿತರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್ ಸರಕಾರ ಅಪ್ರಾಮಾಣಿಕ: ಯಾಸೀನ್ ಮಲ್ಪೆ
ಕಾಂಗ್ರೆಸ್ ಭರವಸೆಗಳನ್ನು ಈಡೇರಿಸಲು ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ

ಬೆಂಗಳೂರು : ಪಂಚ ಗ್ಯಾರಂಟಿಗಳನ್ನು ಪ್ರಾಮಾಣಿಕವಾಗಿ ಜಾರಿಗೊಳಿಸಿದ ಕಾಂಗ್ರೆಸ್ ಸರಕಾರ, ಅಲ್ಪಸಂಖ್ಯಾತರು, ದಲಿತರು ಮತ್ತು ರೈತರಿಗೆ ನೀಡಿದ ಭರವಸೆಗಳ ವಿಚಾರದಲ್ಲಿ ಅಪ್ರಾಮಾಣಿಕತೆ ತೋರುತ್ತಿದೆ ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟದ ಸಂಚಾಲಕ ಮುಹಮ್ಮದ್ ಯಾಸೀನ್ ಮಲ್ಪೆ ಆರೋಪಿಸಿದರು.
2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ 'ಕರ್ನಾಟಕದ ಅಲ್ಪಸಂಖ್ಯಾತರು ಹಾಗೂ ಶೋಷಿತರ ಧ್ವನಿ' ವೇದಿಕೆಯ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಿತು.
ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮುಹಮ್ಮದ್ ಯಾಸೀನ್ ಮಲ್ಪೆ ಅವರು, "ಸಂವಿಧಾನವನ್ನು ಕೈಯಲ್ಲಿ ಹಿಡಿದು ಭಾಷಣ ಮಾಡುವುದಷ್ಟೇ ಮುಖ್ಯವಲ್ಲ, ಸಿಕ್ಕ ಅಧಿಕಾರವನ್ನು ಬಳಸಿ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಆಡಳಿತ ನಡೆಸಬೇಕು. ನಮ್ಮನ್ನು 'ಟೇಕನ್ ಫಾರ್ ಗ್ರಾಂಟೆಡ್' ಎಂದು ಭಾವಿಸಿದರೆ ಕ್ಷಮಿಸುವುದಿಲ್ಲ, ಮುಂದಿನ ದಾರಿಯ ಬಗ್ಗೆ ಒಟ್ಟಾಗಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ" ಎಂದು ಎಚ್ಚರಿಸಿದರು.
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯ ಭರವಸೆಗಳಾದ ಮತಾಂತರ ನಿಷೇಧ ಕಾಯ್ದೆ ರದ್ದು, ಜಾನುವಾರು ಹತ್ಯೆ ನಿಷೇಧ ಕಾಯ್ದೆ ವಾಪಸ್, ಮುಸ್ಲಿಮರ 2ಬಿ ಮೀಸಲಾತಿ ಮರುಸ್ಥಾಪನೆ ಹಾಗೂ ದ್ವೇಷ ಭಾಷಣ ತಡೆಗೆ ಕಠಿಣ ಕಾನೂನು ಜಾರಿಗೆ ತರಬೇಕೆಂಬ ನಾಲ್ಕು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಸಮಾವೇಶದಲ್ಲಿ ಐದು ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಬೆಳಗಾವಿಯಲ್ಲಿ ನಡೆಯಲಿರುವ ಮುಂಬರುವ ಚಳಿಗಾಲದ ಅಧಿವೇಶನದಲ್ಲೇ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಸಂಘಟನೆಗಳು ಸರಕಾರಕ್ಕೆ ನೀಡಿವೆ.






