ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಯಶವಂತ ಸರದೇಶಪಾಂಡೆ
ಬೆಂಗಳೂರು, ಸೆ.29: ಸೋಮವಾರದಂದು ನಗರದಲ್ಲಿ ರಂಗಭೂಮಿ ನಿರ್ದೇಶಕ ಮತ್ತು ನಟ ಯಶವಂತ ಸರದೇಶಪಾಂಡೆ ಅವರು ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.
ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಗಿದ್ದ ಹಿನ್ನೆಲೆ, ಇಲ್ಲಿನ ಖಾಸಗಿ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿತ್ತು. ಆದರೆ, ಅವರು ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ.
ರವಿವಾರ ರಾತ್ರಿ ಧಾರವಾಡದಲ್ಲಿ ನಾಟಕ ಪ್ರದರ್ಶನ ನೀಡಿ, ಸೋಮವಾರ ಬೆಳಗ್ಗೆ ಸುಮಾರು 8.30ಕ್ಕೆ ಬೆಂಗಳೂರಿಗೆ ಬಂದಿದ್ದರು. ಮೃತರು ಪತ್ನಿ ಮಾಲತಿ ಸರದೇಶಪಾಂಡೆ ಮತ್ತು ಪುತ್ರಿ ಕಲ್ಪಶ್ರೀ ಅವರನ್ನು ಅಗಲಿದ್ದಾರೆ. ರಂಗಭೂಮಿ, ಕಿರುತೆರೆ, ಚಿತ್ರರಂಗದ ಹಲವರು ರಂಗ ದಿಗ್ಗಜನನ್ನು ನೆನೆದು ಭಾವುಕರಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಅನೇಕರು ಸಂತಾಪವನ್ನು ಸೂಚಿಸಿದ್ದಾರೆ.
ಯಶವಂತ ಸರದೇಶಪಾಂಡೆ ಅವರು ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದವರು. ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮಾ ಪದವಿ ಪಡೆದವರು.
ಅಂಧಯುಗ, ಇನ್ಸ್ಪೆಕ್ಟರ್ ಜನರಲ್, ಮಿಡ್ಸಮರ್ ನೈಟ್ಸ್ ಡ್ರಿಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ ಅರವತ್ತಕ್ಕೂ ಹೆಚ್ಚು ನಾಟಕಗಳನ್ನು ಅವರು ನಿರ್ದೇಶಿಸಿದ್ದಾರೆ. ರಂಗವರ್ತುಲ, ಬೇಂದ್ರೆ ರಂಗಾವಳಿಯ ಮುಖಾಂತರ ಬೇಂದ್ರೆಯವರ ಎಲ್ಲ ನಾಟಕಗಳನ್ನೂ ರಂಗಕ್ಕೆ ತಂದಿದ್ದಾರೆ.
ರಾಮ ಶ್ಯಾಮ ಭಾಮ ಚಲನಚಿತ್ರದ ಸಂಭಾಷಣೆಗಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದರು. ಮಕ್ಕಳ ಚಲನಚಿತ್ರ ನಿರ್ಮಿಸಿ, ಅತ್ಯುತ್ತಮ ಮಕ್ಕಳ ಚಲನಚಿತ್ರ ಪ್ರಶಸ್ತಿ ಗಳಿಸಿದ್ದರು. 2010ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಜನರಾಗಿದ್ದರು. ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರವು ಒದಗಿಸಿದ 36 ಎಕರೆ ಭೂಮಿಯಲ್ಲಿ ಹುಬ್ಬಳ್ಳಿಯ ರಾಯನಾಳ ಕೆರೆಯಲ್ಲಿ ಆದಿ ರಂಗ ನಾಟಕ ಶಾಲೆ ಸ್ಥಾಪಿಸಿದ್ದಾರೆ.







