‘SIR’ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ಹೋರಾಟ : ಯಡಿಯೂರಪ್ಪ

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ಕಾನೂನು ಕ್ರಮ ಜಾರಿಗೊಳಿಸುವುದು, ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.
ಎಸ್‍ಐಆರ್ ಸಂದರ್ಭದಲ್ಲಿ ಸಲ್ಲಿಸಲಾದ ನಮೂನೆ 7 ಅರ್ಜಿಗಳಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕ್ರಿಯೆಗಳನ್ನು ಕಾನೂನು ಅನುಸಾರ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶನಿವಾರ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರಿಗೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾನೂನು ಕ್ರಮವಾಗಬಾರದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳುವುದು ಪೊಲೀಸರ ಜವಾಬ್ದಾರಿ. ಒಂದು ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ ಯಾವ ರೀತಿ ನಡೆದುಕೊಳ್ಳಬೇಕು ಹಾಗೆ ನಡೆದುಕೊಳ್ಳುತ್ತಿದೆ. ನಮಗೂ ಜವಾಬ್ದಾರಿ ಇದೆ. ನಮ್ಮ ಕಾರ್ಯಕರ್ತರ ಮೇಲಿನ ಎಲ್ಲ ಕ್ರಮಗಳು ಈ ತಕ್ಷಣದಿಂದಲೇ ನಿಲ್ಲಿಸಬೇಕು ಎಂದು ಯಡಿಯೂರಪ್ಪ ಹೇಳಿದರು.
ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಬಂದು ಧರಣಿ ನಡೆಸಿದ ಮುಖ್ಯಮಂತ್ರಿಗೆ ನಾಚಿಕೆ ಆಗಬೇಕು. ನಾವು ಈಗಾಗಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿದ್ದೇವೆ. ನಮ್ಮ ಮನವಿ ಸರಿ ಇದ್ದರೆ ಕ್ರಮ ಕೈಗೊಳ್ಳಲಿ. ಮುಖ್ಯಮಂತ್ರಿ ಮಾತು ಕೇಳಿ ಕಾರ್ಯಕರ್ತರಿಗೆ ಕಿರುಕುಳ ನೀಡಬಾರದು. ಪೊಲೀಸ್ ಅಧಿಕಾರಿಗಳು ಸರಕಾರವನ್ನು ಮೆಚ್ಚಿಸಲು ಕೆಲಸ ಮಾಡುವ ಬದಲು ಕಾನೂನು ಪ್ರಕಾರ ಕೆಲಸ ಮಾಡಲಿ ಎಂದು ಅವರು ಆಗ್ರಹಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯ ಸರಕಾರದ ಒತ್ತಡಕ್ಕೆ ಮಣಿದು ನಮ್ಮ ಕಾರ್ಯಕರ್ತರ ಮೇಲೆ ಎಫ್.ಐ.ಆರ್. ದಾಖಲಿಸದಂತೆ ನಾವು ಡಿಜಿಪಿ ಅವರಿಗೆ ಒತ್ತಾಯ ಮಾಡಿದ್ದೇವೆ. ಹೀಗೆ ಕೇಸು ದಾಖಲಿಸಿದರೆ, ನಾವು ಕೈ ಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ ಎಂದರು.
ಈ ವಿಷಯದಲ್ಲಿ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ರಾಜಕೀಯವಾಗಿ ಬೀದಿಗಿಳಿದು ಹೋರಾಟ ಮಾಡಬೇಕಿದ್ದರೆ ಅದಕ್ಕೂ ನಾವು ತಯಾರಿದ್ದೇವೆ. ಎಫ್.ಐ.ಆರ್. ದಾಖಲು ಮಾಡುವುದನ್ನು ಮುಂದುವರಿಸಿದರೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವ ಕೆಲಸವನ್ನೂ ಮಾಡುತ್ತೇವೆ. ನಮ್ಮ ಕಾರ್ಯಕರ್ತರನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಯಾವ ಹಂತಕ್ಕೂ ಕೂಡ ನಾವು ಹೋಗುವುದಕ್ಕೆ ತಯಾರಿದ್ದೇವೆ ಎಂದು ಅವರು ಹೇಳಿದರು.
ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಮುಖ್ಯಮಂತ್ರಿ ನಮ್ಮ ಕಾರ್ಯಕರ್ತರ ಮೇಲೆ ಎಫ್‍ಐಆರ್ ಹಾಕಿಸಿ ಕಾನೂನು ಉಲ್ಲಂಘನೆ ಮಾಡಿದರೆ ನಾವು ಹೆದರುವುದಿಲ್ಲ. ಸರಕಾರ ಮತ್ತು ಮುಖ್ಯಮಂತ್ರಿಯ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ತಿಳಿಸಿದರು.
ನಮ್ಮ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಮುನ್ನ ಹತ್ತು ಬಾರಿ ಯೋಚಿಸಿ. ಡಿ.ಕೆ.ಶಿವಕುಮಾರ್ ಒತ್ತಡಕ್ಕೆ ಮಣಿದು ಪೊಲೀಸ್ ಸ್ಟೇಷನ್ ಗಳು ಕಾಂಗ್ರೆಸ್ ಕಚೇರಿಗಳಾದರೆ ಸುಮ್ಮನೆ ಕೂರುವುದಿಲ್ಲ. ಯಾವುದೇ ಠಾಣೆಗಳಲ್ಲಿ ಇನ್ಸ್‍ಪೆಕ್ಟರ್‍ಗಳು, ಡಿಸಿಪಿಗಳು ನಮ್ಮ ಕಾರ್ಯಕರ್ತರ ಮೇಲೆ ಎಸ್‍ಐಆರ್ ಸಂಬಂಧ ಕ್ರಮ ಕೈಗೊಂಡರೆ ಆ ಠಾಣೆ ಮುತ್ತಿಗೆ ಹಾಕುತ್ತೇವೆ ಎಂದು ಅಶೋಕ್ ಹೇಳಿದರು.






