ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವ ವಧು-ವರರಿಗೆ ಮಂಗಲ ಸೂತ್ರ ವಿತರಿಸುವ ಮೂಲಕ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿದರು.
ಚಾಮರಾಜನಗರ ಸೆ 26: ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.
ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿಗಳು ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ವಹಿಸಿದ್ದರು. ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಜಿಲ್ಲೆಯ ಶಾಸಕರು ಮತ್ತು ನಾಯಕರು ಉಪಸ್ಥಿತರಿದ್ದರು.







