Koratagere | ಶಾಲಾ ಆವರಣದಲ್ಲಿ ವಿದ್ಯುತ್ ಸ್ಪರ್ಶ: ಪ್ರಥಮ ಪಿಯುಸಿ ವಿದ್ಯಾರ್ಥಿ ಮೃತ್ಯು

ಕೊರಟಗೆರೆ : ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿ.ಎನ್.ದುರ್ಗಾ ಹೋಬಳಿ, ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರಪ್ಪನಹಟ್ಟಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಪುನೀತ್ ಎಂದು ಗುರುತಿಸಲಾಗಿದೆ. ಆತ ತುಮಕೂರಿನ ಊರ್ಕೆರೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಸಂಜೆ ಸುಮಾರು 5.30 ಗಂಟೆ ವೇಳೆಗೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇತರ ವಿದ್ಯಾರ್ಥಿಗಳೊಂದಿಗೆ ಬುಗುರಿ ಆಟವಾಡುತ್ತಿದ್ದ ವೇಳೆ ನೆಲದ ಸಮೀಪ ಜೋತುಬಿದ್ದಿದ್ದ ವಿದ್ಯುತ್ ತಂತಿಯ ಸಂಪರ್ಕಕ್ಕೆ ಬಂದಿದ್ದಾನೆ. ಇತ್ತೀಚೆಗೆ ಸುರಿದ ಮಳೆಯಿಂದ ವಿದ್ಯುತ್ ತಂತಿಯಲ್ಲಿದ್ದ ಸ್ಕಿನ್ ಕಳಚಿ, ಗೋಡೆಗೆ ವಿದ್ಯುತ್ ಹರಿದಿರುವ ಶಂಕೆ ವ್ಯಕ್ತವಾಗಿದೆ. ಗೋಡೆಯನ್ನು ಸ್ಪರ್ಶಿಸಿದ ಕ್ಷಣವೇ ಪುನೀತ್‌ಗೆ ತೀವ್ರ ವಿದ್ಯುತ್ ಶಾಕ್ ತಗುಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾನೆ ಎನ್ನಲಾಗಿದೆ.
ಸ್ಥಳೀಯರು ಕೂಡಲೇ ವಿದ್ಯಾರ್ಥಿಯನ್ನು ರಕ್ಷಿಸಿ ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ.
ಘಟನೆ ಬಳಿಕ ಆಸ್ಪತ್ರೆ ಮುಂಭಾಗ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮಸ್ಥರು ಮತ್ತು ಸಾರ್ವಜನಿಕರು ಶಾಲಾ ಆಡಳಿತ ಹಾಗೂ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.
ಗ್ರಾಮಸ್ಥರ ಪ್ರಕಾರ, ಶಾಲಾ ಆವರಣದಲ್ಲಿ ಜೋತುಬಿದ್ದಿದ್ದ ವಿದ್ಯುತ್ ತಂತಿ ಮತ್ತು ಸ್ಕಿನ್ ಕಳಚಿದ್ದ ವೈರ್ ಕುರಿತು ಹಲವು ಬಾರಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ನಿರ್ಲಕ್ಷ್ಯದಿಂದ ಅಮಾಯಕ ವಿದ್ಯಾರ್ಥಿಯ ಜೀವ ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ನವರು ಸ್ಥಳಕ್ಕೆ ಧಾವಿಸಿದ್ದು ಡಿವೈಎಸ್ಪಿ ಮಂಜುನಾಥ್ ಸಿಪಿಐ ಪುರುಷೋತ್ತಮ್ ಹಾಗೂ ಪಿಎಸ್ಐ ತೀರ್ಥೇಶ್ ಸ್ಥಳ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ .






