Tumkur | ಬೈಕ್ಗೆ ಕಾರು ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು

ಸಾಂದರ್ಭಿಕ ಚಿತ್ರ
ತಿಪಟೂರು: ಬೈಕ್ಗೆ ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಕಸಬಾ ಹೋಬಳಿ ಬಿದಿರೆಗುಡಿ ಬಳಿ ನಡೆದಿದೆ.
ಮೃತರನ್ನು ಅರಸೀಕೆರೆ ತಾಲ್ಲೂಕಿನ ಕಸಬಾ ಹೋಬಳಿ ಬಿ.ಎಲ್.ಕೊಪ್ಪಲು ಬಸವೇಶ್ವರ ನಗರ ನಿವಾಸಿ ವಿಜಯ್ ಕುಮಾರ್ (24) ಎಂದು ಗುರುತಿಸಲಾಗಿದೆ.
ತಿಪಟೂರು ನಗರದ ಟಿ.ಎಂ.ಮಂಜುನಾಥ ನಗರ ಗೇಟ್ ಸಮೀಪದ ವೆಲ್ಡಿಂಗ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವಿಜಯ್ ಕುಮಾರ್ ಅವರು ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುವಾಗ ಬಿದಿರೆಗುಡಿ ಬಳಿ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಚತುಷ್ಪಥ ಹೆದ್ದಾರಿಯಲ್ಲಿ ಸರಿಯಾದ ಸೂಚನಾ ಫಲಕಗಳಿಲ್ಲದೇ ಇರುವುದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿದಿರೆಗುಡಿ ಮತ್ತು ಕೊನೆಹಳ್ಳಿ ಭಾಗಗಳಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಹೆದ್ದಾರಿ ಅಧಿಕಾರಿಗಳು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಇರುವುದರಿಂದ ದಿನನಿತ್ಯ ಅಪಘಾತಗಳು ಸಂಭವಿಸುತ್ತಿವೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಶಾಸಕರ ಅಧ್ಯಕ್ಷತೆಯಲ್ಲಿ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆದಿದ್ದರೂ, ಹೆದ್ದಾರಿ ಅಧಿಕಾರಿಗಳು ಸಭೆಗೆ ಗೈರುಹಾಜರಾಗಿರುವುದಾಗಿ ತಿಳಿದುಬಂದಿದೆ. ಆದರೂ ಕೂಡ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ತೋರಿರುವುದರಿಂದ ಅಪಘಾತಗಳ ಪ್ರಮಾಣ ಹೆಚ್ಚಾಗಿದೆ. ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.






