ತುಮಕೂರು| ಪೊಲೀಸ್ ವಶದಲ್ಲಿದ್ದ ಜೂಜಾಟದ ಆರೋಪಿ ಅನುಮಾನಾಸ್ಪದವಾಗಿ ಮೃತ್ಯು

ಹುಳಿಯಾರು : ಜೂಜಾಡುತ್ತಿದ್ದ ಆರೋಪದ ಮೇಲೆ ಪೊಲೀಸ್ ಠಾಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಪೊಲೀಸರ ದೌರ್ಜನ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಠಾಣೆಯ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಘಟನೆಯ ವಿವರ : ಯಳನಡು ಗ್ರಾಮದ ನಿವಾಸಿ ಕಾಂತರಾಜು (50) ಮೃತಪಟ್ಟ ದುರ್ದೈವಿ. ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದ ಕಾಂತರಾಜು ಸೇರಿದಂತೆ ಐವರು ವ್ಯಕ್ತಿಗಳನ್ನು ಹುಳಿಯಾರು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಠಾಣೆಯಲ್ಲಿ ವಿಚಾರಣೆ ಮುಗಿಸಿ ಹೊರಬರುತ್ತಿದ್ದಂತೆಯೇ ಕಾಂತರಾಜು ಅವರು ಠಾಣೆಯ ಆವರಣದಲ್ಲೇ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಪೊಲೀಸರ ವಿರುದ್ಧ ಗಂಭೀರ ಆರೋಪ: ಕಾಂತರಾಜು ಅವರ ಸಾವು ಸಹಜ ಸಾವಲ್ಲ, ಇದು ಪೊಲೀಸ್ ದೌರ್ಜನ್ಯದಿಂದ ನಡೆದ ಕೊಲೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಠಾಣೆಯೊಳಗೆ ಕಾಂತರಾಜು ಅವರಿಗೆ ತೀವ್ರವಾಗಿ ಹೊಡೆದಿದ್ದಾರೆ ಮತ್ತು ಅತಿಯಾಗಿ ಹೆದರಿಸಿದ್ದಾರೆ. ಈ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ತಾಳಲಾರದೆ ಅವರು ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.
ಠಾಣೆ ಮುಂದೆ ಪ್ರತಿಭಟನೆ: ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ಠಾಣೆಯ ಮುಂದೆ ಜಮಾಯಿಸಿದರು. ಮೃತದೇಹವನ್ನು ಠಾಣೆಯಲ್ಲಿಯೇ ಇಟ್ಟು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.
ವಿಷಯ ತಿಳಿಯುತ್ತಿದ್ದಂತೆಯೇ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರು ಠಾಣೆಗೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು. ಮಧ್ಯರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ.ವಿ.ಅಶೋಕ್ ಅವರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಸದ್ಯ ಕಾಂತರಾಜು ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಒಂದು ವೇಳೆ ಪೊಲೀಸರ ಕಡೆಯಿಂದ ಲೋಪವಾಗಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹುಳಿಯಾರು ಪಟ್ಟಣದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.






