ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ

ಉಡುಪಿ, ಆ.17: ಉಡುಪಿ ಜಿಲ್ಲೆಯಾದ್ಯಂತ ಇಂದು ಬೆಳಗಿನ ಜಾವದಿಂದ ಮತ್ತೆ ಮಳೆ ಬಿರುಸು ಪಡೆದುಕೊಂಡಿದ್ದು, ಸಂಜೆಯವರೆಗೆ ವಿವಿಧೆಡೆ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಕಳೆದ 24ಗಂಟೆಗಳ ಅವಧಿಯಲ್ಲಿ ಕಾರ್ಕಳ-36.8ಮಿ.ಮೀ., ಕುಂದಾಪುರ -48.0ಮಿ.ಮೀ., ಉಡುಪಿ- 32.3ಮಿ.ಮೀ., ಬೈಂದೂರು-62.8 ಮಿ.ಮೀ., ಬ್ರಹ್ಮಾವರ- 41.5ಮಿ.ಮೀ., ಕಾಪು- 12.6ಮಿ.ಮೀ., ಹೆಬ್ರಿ- 91.8ಮಿ.ಮೀ ಮಳೆಯಾಗಿದ್ದು, ಜಿಲ್ಲೆಯಲ್ಲಿ ಸರಾಸರಿ 49.0 ಮಿ.ಮೀ. ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಆ.18ರಿಂದ 19ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಸಂದರ್ಭದಲ್ಲಿ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಇರಲಿದ್ದು ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ನೀಡಿದೆ.





