ಉಡುಪಿ ಜಿಲ್ಲೆಯ ಅಂಗನವಾಡಿಯಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ -https://karnemakaone.kar.nic.in/abcd/-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್ ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.







