ಉಡುಪಿ: ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ

ಉಡುಪಿ, ಸೆ.18: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ಪ್ರತಿ ವಷರ್ ಅಕ್ಟೋಬರ್ 2ನ್ನು ಸ್ವಚ್ಛ ಭಾರತ್ ದಿನವನ್ನಾಗಿ ಆಚರಿಸುತ್ತಿದ್ದು ಪೂರ್ವಾಭಾವಿಯಾಗಿ ಹಲವು ಜಾಗೃತಿ ಕಾರ್ಯಕ್ರಮ ಹಾಗೂ ಸಾಮೂಹಿಕ ಸ್ವಚ್ಛತಾ ಶ್ರಮದಾನಗಳನ್ನು ಅಲ್ಲಲ್ಲಿ ಹಮ್ಮಿ ಕೊಳ್ಳಲಾಗುತ್ತಿದೆ.
ನಗರ ಮತ್ತು ಗ್ರಾಮೀಣ ಪ್ರದೇಶದ ಜನರಲ್ಲಿ ನೈರ್ಮಲ್ಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರ ಗಳ ಸಚಿವಾಲಯ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ- 2025’ ಅಭಿಯಾನವನ್ನು ’ಸ್ವಚ್ಛೋತ್ಸವ’ ಎಂಬ ಘೋಷವ್ಯಾಕ್ಯದೊಂದಿಗೆ ಆಚರಿಸುತ್ತಿದೆ.
2017ರಲ್ಲಿ ಆರಂಭಗೊಂಡ ಸ್ವಚ್ಛ ಭಾರತ್ ಅಭಿಯಾನ ಇದೀಗ 11ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದು, ಈ ಯೋಜನೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ, ಸಮುದಾಯದ ಭಾಗವಹಿಸುವಿಕೆ ಮತ್ತು ಶುಚಿತ್ವದ ಮಹತ್ವದ ಕುರಿತು ವ್ಯಾಪಕವಾದ ಅರಿವು ಮೂಡಿಸಲು ಉಡುಪಿ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ನೈರ್ಮಲ್ಯ ಅರಿವು, ಸ್ವಚ್ಛತಾ ಶ್ರಮದಾನ, ಬೀಚ್‌ಗಳ ಸ್ವಚ್ಛತೆ, ಜಲ ಮೂಲಗಳ ಸ್ವಚ್ಛತೆ, ಸ್ವಚ್ಛತಾ ಸಿಬ್ಬಂದಿಗಳಿಗೆ ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ.
ಈ ಅಭಿಯಾನಕ್ಕೆ ಸೆ.17ರಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧನೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಪಾಕ್ಷಿಕಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಯಶ್‌ಪಾಲ್ ಸುವರ್ಣ, ಸ್ವಚ್ಛ ಭಾರತ್ ಮಿಷನ್‌ನ ಜಿಲ್ಲಾ ನೋಡಲ್ ಅಧಿಕಾರಿ ಡಾ.ಉದಯ ಶೆಟ್ಟಿ, ಜಿ.ಪಂ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.







