ಉಡುಪಿ: ರಾ.ಹೆಣ್ಣು ಮಕ್ಕಳ ದಿನಾಚರಣೆ; ಜನಜಾಗೃತಿ ಜಾಥಾ

ಉಡುಪಿ, ಜ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿ.ಸಿ- ಪಿ.ಎನ್.ಡಿ.ಟಿ ಉಡುಪಿ ಜಿಲ್ಲೆ ಹಾಗೂ ನ್ಯೂಸಿಟಿ ನಸಿರ್ಂಗ್ ವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಬೀದ್ ಗದ್ಯಾಳ್, ಹೆಣ್ಣು ಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣ ವನ್ನು ನಿರ್ಮಿಸಲು, ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಹಾಗೂ ಲಿಂಗತಾರತಮ್ಯವನ್ನು ಹೋಗಲಾಡಿ ಸುವ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಹೆಣ್ಣು ಮಕ್ಕಳ ಹಕ್ಕು ಮತ್ತು ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲು ಹಾಗೂ ಹೆಣ್ಣು ಮಕ್ಕಳು ಸಶಕ್ತರಾಗಲು ಸಮಾಜ ಅವಕಾಶ ಮಾಡಿಕೊಡಬೇಕು ಎಂದು ಅವರು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀರಾಮ್ ರಾವ್, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಉದ್ದೇಶ, ಮಹತ್ವ, ಭ್ರೂಣಲಿಂಗ ಪತ್ತೆ ಮತ್ತು ತಡೆಗಟ್ಟುವ ಕಾನೂನುಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.
ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿ ಕಾರಿಗಳು, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಸಮಾಲೋಚಕರು, ಮಣಿಪಾಲ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಜಾಥಾ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಮುಖ್ಯ ರಸ್ತೆಯಲ್ಲಿ ಸಾಗಿ ಮಣಿಪಾಲದ ಕಾಯಿನ್ ಸರ್ಕಲ್ ಮೂಲಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಪನಗೊಂಡಿತು.







