ಉಡುಪಿ:ಹವಾಮಾನ ಬದಲಾವಣೆ ಕುರಿತ ಕ್ರಿಯಾ ಯೋಜನೆಗೆ ತರಬೇತಿ

ಉಡುಪಿ, ಮೇ 15: ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಹವಾಮಾನ ಬದಲಾವಣೆ ಕುರಿತು ಕ್ರಿಯಾ ಯೋಜನೆ ತರಬೇತಿ ಕಾರ್ಯಕ್ರಮವು ಇಂದು ಮಣಿಪಾಲದ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು.
ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಂಪ್ರಿ ಹವಾಮಾನ ಬದಲಾವಣೆ ವಿಭಾಗದ ಹಿರಿಯ ಸಮಾಲೋಚಕಿ ಡಾ. ಸರಿತಾ ಬೋಯಾ ಮಾತನಾಡಿ, ಹವಾಮಾನ ಬದಲಾವಣೆಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಜಿಲ್ಲೆಯಲ್ಲಿನ ಸವಾಲುಗಳನ್ನು ನಿಭಾಯಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಸಬೇಕು ಎಂದರು.
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯು, ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವ ಶಾಸ್ತ್ರ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಾಯತ್ತ ಸಂಸ್ಥೆಯಾಗಿದ್ದು, ರಾಜ್ಯ ಸರ್ಕಾರದ ನಿರ್ದೇಶನ ದಂತೆ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ 2024 ರಲ್ಲಿ ಕೇಂದ್ರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅನುಮೋದನೆ ಪಡೆದಿದೆ. ಈ ಯೋಜನೆ ಯಡಿಯಲ್ಲಿ ಹವಾಮಾನ ಬದಲಾವಣೆಯ ಕುರಿತ ಕಾರ್ಯ ಅಂಶಗಳನ್ನು ಆಧರಿಸಿ, ವಿವಿಧ ಇಲಾಖೆಗಳು 2025-2030ರ ಅವಧಿಗೆ ಪ್ರಮುಖ ಕಾರ್ಯಕ್ಷಮತಾ ಸೂಚಕಗಳನ್ನು ಗುರಿಗಳೊಂದಿಗೆ ನಿಗದಿಪಡಿಸಿವೆ. ಈ ಸೂಚಕಗಳ ಪರಿಣಾಮಕಾರಿ ಅನುಷ್ಠಾನವನ್ನು ಮಾಡಬೇಕಿದೆ ಎಂದರು.
ಎಂಪ್ರಿ ಸಂಸ್ಥೆಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಕಳೆದ ಸಾಲಿನಲ್ಲಿ ರಾಜ್ಯದ 22 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುಗಿಸಿದೆ. ಮುಂದುವರಿದ ಭಾಗವಾಗಿ, 2026-27ನೇ ಸಾಲಿನಲ್ಲಿ ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ವಿಸ್ತರಿಸ ಲಾಗುತ್ತಿದೆ. ಈ ಕ್ರಿಯಾ ಯೋಜನೆಗೆ ಒಟ್ಟು 15 ಇಲಾಖೆಗಳು ಒಳಪಡಲಿದ್ದು, ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆಯನ್ನು ಸಂಬಂಧಿಸಿದ ಎಲ್ಲ ಇಲಾಖೆಗಳು ಕಾಲಮಿತಿಯೊಳಗೆ ಅನುಷ್ಠಾನ ಗೊಳಿಸಿ ನಿಗದಿತ ಗುರಿ ತಲುಪಬೇಕು ಎಂದರು.
ಹವಾಮಾನ ಬದಲಾವಣೆಯಿಂದ ಉಂಟಾಗುವ ಪರಿಣಾಮಗಳನ್ನು ಎದುರಿಸಲು, ನಿಯಂತ್ರಿಸಲು ಹಾಗೂ ಭವಿಷ್ಯದ ಹವಾಮಾನ ಬದಲಾವಣೆ ತೀವ್ರತೆಯನ್ನು ಕಡಿಮೆ ಮಾಡಲು ಇರುವ ಮೂಲಭೂತ ಜ್ಞಾನ ಹಾಗೂ ಮಾರ್ಪಾಡು ಪದ್ಧತಿಯನ್ನು ಸಮರ್ಪಕವಾಗಿ ಅಳವಡಿಸಿಕೊಂಡು ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು.
ಹವಾಮಾನ ಬದಲಾವಣೆಯಿಂದ ಅಕಾಲಿಕ ಮಳೆ, ತಾಪಮಾನ ಹೆಚ್ಚಳ, ಚಂಡಮಾರುತ, ಪ್ರವಾಹ, ಕೃಷಿ ಸೇರಿ ದಂತೆ ವಿವಿಧ ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಸಾರ್ವಜನಿಕರ ಜೀವನೋಪಾಯ ಮತ್ತು ಆರ್ಥಿಕತೆಯನ್ನು ದುರ್ಬಲಗೊಳಿಸುತ್ತದೆ. ಜೊತೆಗೆ ನೈಸರ್ಗಿಕ ಪರಿಸರ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ಪ್ರಕೃತಿಯೂ ಸಹ ತನ್ನದೇ ಆದ ವ್ಯವಸ್ಥೆಗಳನ್ನು ಒಳಗೊಂಡಿದ್ದು, ಅದರಲ್ಲಿ ಸ್ವಲ್ಪ ಏರಿಳಿತವಾದರೂ ಹಲವು ಅಸಮ ತೋಲನ ಸ್ಥಿತಿಗೆ ಕಾರಣವಾಗುತ್ತದೆ. ಯಾವುದೇ ಯೋಜನೆ ಯನ್ನು ಅನುಷ್ಠಾನ ಮಾಡುವಾಗ ಎದುರಾಗುವ ಸಾಮಾಜಿಕ ದುಷ್ಪರಿಣಾಮ ಗಳ ಬಗ್ಗೆ ಯೋಚಿಸಿ ನಂತರ ಯೋಜನೆಗಳನ್ನು ರೂಪಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ತೇಜು ಕುಮಾರ್ ಎನ್ ಅವರು, ಕರ್ನಾಟಕ ರಾಜ್ಯ ಜಲ ಸಂಪನ್ಮೂಲ ಕ್ರಿಯಾ ಯೋಜನೆ ಕುರಿತು ಹಾಗೂ ಜಿಲ್ಲೆಯಲ್ಲಿನ ಸ್ಥಳೀಯ ನೀರಿನ ಮೂಲ, ಅಂತರ್ಜಲ ಮಟ್ಟ, ಮಳೆಯ ಪ್ರಮಾಣ, ನದಿಗಳ ನೀರಿನ ಗುಣಮಟ್ಟದ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ರೆಡ್ಡಪ್ಪ, ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಕುಮಾರಸ್ವಾಮಿ, ಮೆಸ್ಕಾಂನ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಸನ್ನಕುಮಾರ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಎಂಪ್ರಿ ತರಬೇತಿ ಮುಖ್ಯಸ್ಥೆ ಲತಾ ಎಂ.ಹೆಚ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.






