ರಕ್ತದಾನ ಜೀವ ಉಳಿಸುವ ಪ್ರಾಮಾಣಿಕ ಕಾರ್ಯ: ಸಂಸದ ಕೋಟ

ಕುಂದಾಪುರ, ಜೂ.20: ರಕ್ತದಾನವು ಜೀವ ಉಳಿಸುವ ನಿಟ್ಟಿನಲ್ಲಿ ಅತ್ಯಂತ ಪ್ರಾಮಾಣಿಕ ಕಾರ್ಯವಾಗಿದೆ. ಯುದ್ಧ ಹಾಗೂ ಅವಘಡಗಳ ಸಂದರ್ಭದಲ್ಲಿ ಅಗತ್ಯ ರಕ್ತವನ್ನು ನೀಡುವುದು ಮತ್ತು ಆರೋಗ್ಯ ಸೇವೆಗಳ ಮೂಲಕ ರೆಡ್ ಕ್ರಾಸ್ ಸಂಸ್ಥೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದೆ. ರಕ್ತದಾನದ ಬಗ್ಗೆ ಸಾಕಷ್ಟು ಜಾಗೃತಿ, ಮೂಡಿಸುವುದು ಮತ್ತು ರಕ್ತದಾನಿಗಳ ಸಂಖ್ಯೆ ಹೆಚ್ಚಾಗಲಿ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ಶನಿವಾರ ಕಾಲೇಜಿನಲ್ಲಿ ಆಯೋಜಿಸಲಾದ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಅಧ್ಯಕ್ಷತೆಯನ್ನು ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರದ ಸಭಾಪತಿ ಎಸ್.ಜಯಕರ ಶೆಟ್ಟಿ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆಯ ಕೋಶಾಧ್ಯಕ್ಷ ಶಿವರಾಮ ಶೆಟ್ಟಿ, ಭಂಡಾರ್‌ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಸತ್ಯ ನಾರಾಯಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಸರೋಜಾ ಎಂ. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಕ್ತದಾನ ಶಿಬಿರ ಆಯೋಜಿಸಿದ ಉಡುಪಿ ಜಿಲ್ಲೆಯ ವಿವಿಧ ಪದವಿ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ಮತ್ತು ಅತಿಹೆಚ್ಚು ಬಾರಿ ರಕ್ತದಾನ ಮಾಡಿದವರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಕಾಲೇಜುಗಳ ಪರವಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು ಮತ್ತು ರಕ್ತದಾನಿಗಳ ಪರವಾಗಿ 75 ಬಾರಿ ರಕ್ತದಾನ ಮಾಡಿದ ಸುದರ್ಶನ ಬರೆಕಟ್ಟೆ ಅನಿಸಿಕೆ ವ್ಯಕ್ತಪಡಿಸಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್ ಸ್ವಾಗತಿಸಿದರು. ಖಜಾಂಚಿ ಶಿವರಾಮ ಶೆಟ್ಟಿ ವಂದಿಸಿದರು. ಪ್ರಥಮ ಚಿಕಿತ್ಸೆ ತರಬೇತುದಾರರಾದ ಡಾ.ಸೋನಿ ಡಿಕೊಸ್ತಾ ಕಾರ್ಯಕ್ರಮ ನಿರೂಪಿಸಿದರು.






