ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ, ಆ. 4: ಇನ್ಫೋಸಿಸ್ ಪ್ರತಿಷ್ಠಾನ ಹಾಗೂ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿರುವ ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ಪಾಲ್ ಎ.ಸುವರ್ಣ ಮಾತನಾಡಿ, ದೇಶದ ಅಭಿವೃದ್ಧಿಗೆ ಇನ್ಫೋಸಿಸ್ ಪ್ರತಿಷ್ಠಾನದ ಕೊಡುಗೆ ಮಹತ್ವದ್ದಾಗಿದೆ. ಇಂತಹ ಡಿಜಿಟಲ್ ಸಾಕ್ಷರತಾ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲವನ್ನು ವೃದ್ಧಿಸುವುದರ ಜೊತೆಗೆ, ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸಲು ಸಹಕಾರಿಯಾಗಲಿವೆ ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ.ನಿಕೇತನ ಮಾತನಾಡಿ, ವಿದ್ಯಾರ್ಥಿಗಳು ಡಿಜಿಟಲ್ ತಂತ್ರಜ್ಞಾನದ ಸಾಧಕ-ಬಾಧಕಗಳನ್ನು ಅರಿತುಕೊಂಡು, ಅದರ ಜವಾಬ್ದಾರಿಯುತ ಬಳಕೆಯ ಕುರಿತು ಜ್ಞಾನ ಹೊಂದಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಡಿಜಿಟಲ್ ಸಾಕ್ಷರರಾಗುವ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಡುಪಿ ಡಯಟ್ ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್ ಕಾಮತ್, ಉಡುಪಿ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾ ಪಿ. ಹಾಗೂ ಡಾ.ಯಲ್ಲಮ್ಮ, ಐಕ್ಯುಎಸಿ ಸಂಚಾಲಕಿ ಪ್ರೊ.ಶ್ರೀಮತಿ ಅಡಿಗ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಭಟ್ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ರಾಜೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಗ್ರಂಥಪಾಲಕರಾದ ವೆಂಕಟೇಶ್ ವಂದಿಸಿದರು






