ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ: ಸಿಎಂಗೆ ಶಾಸಕ ಸುನೀಲ್ ಕುಮಾರ್ ಮನವಿ

ಕಾರ್ಕಳ, ಸೆ.9: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮುಂಬರುವ ಐತಿಹಾಸಿಕ ಶ್ರೀಗೊಮ್ಮಟೇಶ್ವರಸ್ವಾಮಿಯ ಮಹಾಮಸ್ತಕಾ ಭಿಷೇಕದ ಸಿದ್ಧತೆ ಕುರಿತು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್, ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದರು.
ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಮಹಾ ಮಸ್ತಕಾಭಿಷೇಕಕ್ಕೆ 2027ರ ಫೆಬ್ರವರಿ 18ರಿಂದ ಹತ್ತು ದಿನಗಳ ಕಾಲ ನಡೆಯಲಿದ್ದು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಯಾತ್ರಾರ್ಥಿ ಗಳು, ಮತ್ತು ಪ್ರವಾಸಿಗರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು.
ಮಂಗಳೂರಿನಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಸಮಗ್ರ ಹಾಗೂ ದೀರ್ಘಕಾಲಿಕ ಅಭಿವೃದ್ಧಿಗೆ ಪೂರಕವಾದ ಶಾಶ್ವತ ಯೋಜನೆಗಳನ್ನು ರೂಪಿಸುವಂತೆ ಶಾಸಕ ವಿ. ಸುನಿಲ್ ಕುಮಾರ್, ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಕುರಿತು, ಕಾರ್ಕಳ ಸೇರಿದಂತೆ ಕರಾವಳಿ ಭಾಗದ ಪ್ರವಾಸೋದ್ಯಮ, ಕಂಬಳ, ಮೂಲಭೂತ ಸೌಕರ್ಯಗಳು, ಉದ್ಯೋಗ ಹಾಗೂ ನೀರಾವರಿ ಕ್ಷೇತ್ರಗಳ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಸಚಿವ ಸಂಪುಟ ಸಭೆಯ ಮುಂದಿಟ್ಟು, ಅವುಗಳಿಗೆ ಅಗತ್ಯವಿರುವ ಅನುದಾನ ಹಾಗೂ ಆಡಳಿತಾತ್ಮಕ ಮಂಜೂರಾತಿ ನೀಡುವಂತೆ ಹಲವು ಪ್ರಮುಖ ವಿಷಯಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದು ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳಿಗೆ ರಾಜ್ಯ ಸರಕಾರದಿಂದ ಸೂಕ್ತ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದು ಶಾಸಕ ವಿ. ಸುನಿಲ್ ಕುರ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






