ಗಣೇಶೋತ್ಸವದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಚನೆ; ಉಡುಪಿ ಜಿಲ್ಲೆಯಾದ್ಯಂತ ಬಿಗಿ ಭದ್ರತೆ
► 996 ಪೊಲೀಸರ ನಿಯೋಜನೆ

ಸಾಂದರ್ಭಿಕ ಚಿತ್ರ
ಉಡುಪಿ, ಸೆ.13: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಕಾರ್ಯಕ್ರಮಗಳು ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 492 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ/ವಿಸರ್ಜನೆ ನಡೆಯಲಿದ್ದು, ಅವುಗಳಲ್ಲಿ 415 ಸಾಮಾನ್ಯ, 74 ಸೂಕ್ಷ್ಮ ಹಾಗೂ 3 ಅತಿಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದೆ. ಸೆ.14ರಿಂದ 29ರವರೆಗೆ ವಿವಿಧ ದಿನಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದೆ.
ಸೆ.14ರಂದು 211, 15ರಂದು 108, 16ರಂದು 114, 17ರಂದು 13, 18ರಂದು 29, 19ರಂದು 4, 20ರಂದು 5, 22, 23, 24ರಂದು ತಲಾ ಒಂದು, 25ರಂದು 2, 26ರಂದು 1 ಮತ್ತು 29ರಂದು 2 ಸೇರಿದಂತೆ ಒಟ್ಟು 492 ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದೆ.
ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ನಿಗದಿತ ಮಾರ್ಗಗಳು ಹಾಗೂ ಸ್ಥಳಗಳನ್ನು ಗುರುತಿಸಲಾಗಿದ್ದು, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಶಾಂತಿ ಸಮಿತಿ ಸಭೆಗಳು: ಗಣೇಶೋತ್ಸವವು ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ 22 ಶಾಂತಿ ಸಮಿತಿ ಸಭೆಗಳನ್ನು ನಡೆಸಲಾಗಿದೆ.
ಸಾರ್ವಜನಿಕರು, ಗಣೇಶೋತ್ಸವ ಸಮಿತಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಮನ್ವಯ ಸಾಧಿಸಿ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮಗಳು: ಗಣೇಶೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
2026ನೇ ಸಾಲಿನ ದಾಖಲೆಗಳ ಪ್ರಕಾರ ವಿವಿಧ ಮುನ್ನೆಚ್ಚರಿಕಾ ಕ್ರಮಗಳಡಿ ಕ್ರಮ ಜರಗಿಸಲಾಗಿದ್ದು, 611 ಮಂದಿಯ ವಿರುದ್ಧ ಕ್ರಮ ಕೈಗೊಂಡು, 487 ಮಂದಿಯನ್ನು ಬಾಂಡ್ ಓವರ್ ಮಾಡಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಬಿಗಿ ಬಂದೋಬಸ್ತ್: ಗಣೇಶೋತ್ಸವದ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಎಎಸ್ಪಿ/ಡಿವೈಎಸ್ಪಿ -3, ಪೊಲೀಸ್ ನಿರೀಕ್ಷಕರು- 7, ಪೊಲೀಸ್ ಉಪ ನಿರೀಕ್ಷಕರು- 37, ಸಹಾಯಕ ಪೊಲೀಸ್ ಉಪನಿರೀಕ್ಷಕರು- 83, ಹೆಡ್ ಕಾನ್ಸ್ಟೇಬಲ್, ಕಾನ್ಸ್ಟೇಬಲ್, ಮಹಿಳಾ ಕಾನ್ಸ್ಟೇಬಲ್- 680, ಜಿಲ್ಲಾ ಸಶಸ್ತ್ರ ಪಡೆ- 20, ಕೆಎಸ್ಆರ್ಪಿ ತುಕಡಿ- 3, ಹೋಮ್ ಗಾರ್ಡ್ಗಳು- 163, ಪಿಎ ಸಿಸ್ಟಮ್- 12, ಡ್ರೋನ್ 3 ಸೇರಿದಂತೆ ಒಟ್ಟು 996 ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಮನವಿ: ಗಣೇಶೋತ್ಸವ ಹಾಗೂ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮಗಳನ್ನು ಶಾಂತಿ ಯುತವಾಗಿ ಆಚರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕರು ಮತ್ತು ಗಣೇಶೋತ್ಸವ ಸಮಿತಿಗಳಿಗೆ ಮನವಿ ಮಾಡಿದೆ.
ಗಣೇಶ ಮೂರ್ತಿಗಳ ವಿಸರ್ಜನೆಯನ್ನು ನಿಗದಿಪಡಿಸಿದ ಸ್ಥಳ ಮತ್ತು ಮಾರ್ಗಗಳಲ್ಲಿಯೇ ನಡೆಸಬೇಕು. ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನೀಡುವ ಸೂಚನೆಗಳನ್ನು ಪಾಲಿಸಬೇಕು. ಮೆರವಣಿಗೆಯ ಸಂದರ್ಭದಲ್ಲಿ ಸಂಚಾರಕ್ಕೆ ಅಡಚಣೆಯಾಗದಂತೆ ಸಹಕರಿಸಬೇಕು. ಯಾವುದೇ ರೀತಿಯ ಪ್ರಚೋದನಕಾರಿ ಘೋಷಣೆ, ಅಹಿತಕರ ಘಟನೆ ಅಥವಾ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು.
ಗಣೇಶೋತ್ಸವದ ಸಂದರ್ಭದಲ್ಲಿ ಜಿಲ್ಲೆಯ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮದ್ಯ ಮಾರಾಟ ನಿಷೇಧ
ಸೆ.14ರಿಂದ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಸರ್ಜನೆಯು ನಡೆಯಲಿದ್ದು, ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಸೆ.14 ರಂದು ಜಿಲ್ಲೆಯಾದ್ಯಂತ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ, ಸೆ.16ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12ರ ವರೆಗೆ, ಉಡುಪಿ ನಗರ ಠಾಣಾ ವ್ಯಾಪ್ತಿಯ ಮೂಡ ನಿಡಂಬೂರು, ಶಿವಳ್ಳಿ, ಅಂಬಲಪಾಡಿ ಮತ್ತು ಪುತ್ತೂರು ಗ್ರಾಮಗಳ ವ್ಯಾಪ್ತಿಗಳಲ್ಲಿ ಮತ್ತು 18ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12ರವರೆಗೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು ಮತ್ತು ತ್ರಾಸಿ ಗ್ರಾಮಗಳ ವ್ಯಾಪ್ತಿಗಳಲ್ಲಿ, ಕುಂದಾಪುರ ನಗರ ಠಾಣಾ ವ್ಯಾಪ್ತಿಯ ಕಸಬಾ, ವಡೇರಹೋಬಳಿ ಮತ್ತು ಕೋಟೇಶ್ವರ ಗ್ರಾಮಗಳ ವ್ಯಾಪ್ತಿಗಳಲ್ಲಿ ಮತ್ತು ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮಜೂರು, ಮಲ್ಲಾರು ಮತ್ತು ಮುಳೂರು ಗ್ರಾಮಗಳ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ಗಳ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.






