ಮುಖ್ಯಮಂತ್ರಿಗಳ ಸಭೆ ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಉಡುಪಿ, ಸೆ.17: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಳೆ ಹೆಬ್ರಿಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಸ್ತೂರಿರಂಗನ್ ವರದಿಯ ವ್ಯಾಪ್ತಿಯಲ್ಲಿ ಬರುವ ಜನ ಸಾಮಾನ್ಯರ ಸಮಸ್ಯೆಗಳನ್ನು ಅರಿಯಲು ಕರೆದಿರುವ ಸಭೆ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹ ಕರ ವ್ಯವಹಾರಗಳ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಅಧಿಕಾರಿ ಗಳಿಗೆ ಸೂಚನೆಗಳನ್ನು ನೀಡಿದ್ದಾರೆ.
ಇಂದು ಸಂಜೆ ಹೆಬ್ರಿ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹೆಬ್ರಿಯಲ್ಲಿ ಕರೆದಿರುವ ಸಭೆಗೆ ಪೂರ್ವಸಿದ್ಥತೆ ಹಾಗೂ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಕಾರ್ಯಕ್ರಮವನ್ನು ಸರಕಾರದ ಶಿಷ್ಟಾಚಾರದಂತೆ ಆಯೋಜಿಬೇಕು. ಸಭೆಗೆ ಹೆಚ್ಚು ಜನರು ಆಗಮಿಸಲಿರುವುದರಿಂದ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಹಾಗೂ ಹೆಲಿಪ್ಯಾಡ್ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸಭೆಗೆ ಆಗಮಿಸುವ ಜನಸಾಮಾನ್ಯರ ಅರೋಗ್ಯದಲ್ಲಿ ಸಮಸ್ಯೆ ಉಂಟಾದರೆ ತಕ್ಷಣದಲ್ಲಿ ಚಿಕಿತ್ಸೆ ನೀಡಲು ಅನುಕೂಲ ವಾಗುವಂತೆ ತಾತ್ಕಾಲಿಕ ತುರ್ತು ಆರೋಗ್ಯ ಚಿಕಿತ್ಸಾ ಕೇಂದ್ರವನ್ನು ತೆರೆದು, ಕೇಂದ್ರದಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸುವುದರೊಂದಿಗೆ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲು ಸೂಚನೆ ನೀಡಿದರು.
ಸಭೆಗೆ ಆಗಮಿಸುವವರಿಗೆ ಆಸನ, ಕುಡಿಯುವ ನೀರು ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸ ಬೇಕು, ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಹಾಗೂ ವಿದ್ಯುತ್ಛಕ್ತಿ ಅಡಚಣೆ ಉಂಟಾಗದಂತೆ ನಿರಂತರ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು. ಧ್ವನಿವರ್ಧಕದ ವ್ಯವಸ್ಥೆ ಸಮರ್ಪಕ ವಾಗಿ ಇರುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ಪಶ್ಚಿಮಘಟ್ಟದ ಕಾಡಂಚಿನ ಗ್ರಾಮಗಳ ಜನರು ಸಭೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅಗತ್ಯಕ್ಕೆ ತಕ್ಕಂತೆ ಬಸ್‌ಗಳ ವ್ಯವಸ್ಥೆ ಮಾಡಲು ಸಚಿವರು ತಿಳಿಸಿದರು. ಅಧಿಕಾರಿಗಳು ಜವಾಬ್ದಾರಿಯ ಬಗ್ಗೆ ನಿರ್ಲಕ್ಷ ತೋರದೇ ಅಚ್ಚುಕಟ್ಟಾಗಿ ನಡೆಸಲು ಮುಂದಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮುಖಂಡರಾದ ಉದಯ್‌ಕುಮಾರ್ ಶೆಟ್ಟಿ ಮುನಿಯಾಲು, ಕಿಶನ್ ಹೆಗ್ಡೆ, ಕೊಳ್ಕೆಬೈಲು, ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿ.ಎಫ್.ಓ ರುಥ್ರೇನ್ ಪಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮತ್ತಿತರರು ಉಪಸ್ಥಿತರಿದ್ದರು.






