ಉಡುಪಿಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಉಡುಪಿ, ಸೆ.17: ಸರಕಾರ ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗಾಗಿ ಪಿ.ಎಂ ವಿಶ್ವಕರ್ಮ ಯೋಜನೆಯನ್ನು ಅನುಷ್ಠಾನಗೊಳಿಸಿ, ಆ ಮೂಲಕ ಸಮುದಾಯಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ದೇಶದ ಪಾರಂಪರಿಕ ಕುಲ ಕಸುಬುಗಳಿಗೆ ಬಲ ತುಂಬುವಲ್ಲಿ ಈ ಯೋಜನೆ ಸಹಕಾರಿಯಾಗಿದ್ದು, ಯೋಜನೆಗಳ ಲಾಭ ಪಡೆದುಕೊಳ್ಳುವುದರ ಮೂಲಕ ಸಮುದಾಯದ ಬಹಳಷ್ಟು ಜನರು ಬದುಕು ಕಟ್ಟಿಕೊಂಡಿದ್ದಾರೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.
ನಗರದ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಪ್ರಪಂಚ ನಿರ್ಮಾಣದಲ್ಲಿ ಶಿಲ್ಪಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ವೇದ- ಉಪನಿಷತ್ತುಗಳಲ್ಲಿರುವ ವಿಚಾರಧಾರೆಗಳನ್ನು ಅಳವಡಿಸಿಕೊಂಡಾಗ ದೇವರು ಯಾವ ಉದ್ದೇಶಕ್ಕಾಗಿ ಮನುಕುಲವನ್ನು ಸೃಷ್ಟಿಸಿದ್ದಾನೆಂಬುದು ಅರಿವಿಗೆ ಬರುತ್ತದೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಡುಕುತ್ಯಾರು ಆನೆಗುಂದಿ ಮಠದ ಲೋಲಾಕ್ಷ ಶರ್ಮ ವಿಶ್ವಕರ್ಮರ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವೃತ್ತಿ ಸಾಧನೆಗೈದ ವಿಶ್ವಕರ್ಮ ಸಮಾಜದ ಐದು ಮಂದಿ ಹಿರಿಯರನ್ನು ಸನ್ಮಾನಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಇಲಾಖೆಯ ಸಿಬ್ಬಂದಿ ವರ್ಷಾ ಬಿ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.






