ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಅ.9: ವಿದ್ಯಾರ್ಥಿಗಳಿಗೆ ನಮ್ಮ ದೇಶದ ಸಂವಿಧಾನದ ಬಗ್ಗೆ ಹಾಗೂ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಯುವ ಸಂಸತ್ತು ಸಭೆಯನ್ನುತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾ ಗುತ್ತಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ ಆಯೋಜನೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಈ ಸಭೆಯನ್ನು ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ ಎಂದವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಮ್ಮ ದೇಶದ ಸಂವಿಧಾನದ ಅನ್ವಯ ಸರಕಾರದ ಕಾರ್ಯಗಳು ನಡೆಯುತ್ತವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ತಮ್ಮ ಪ್ರಭುಗಳನ್ನು ಆಯ್ಕೆ ಮಾಡಿ ಸರಕಾರ ನಡೆಸಲು ಅನುವು ಮಾಡಿಕೊಡಲಾಗಿದೆ. ಜನಸಾಮಾನ್ಯರ ಆಶೋತ್ತರಗಳನ್ನು ನೆರವೇರಿಸಲು ಸಂಸತ್ತಿನಲ್ಲಿ ಕಾರ್ಯ ಕಲಾಪಗಳು ಯಾವೆಲ್ಲಾ ರೀತಿಯಲ್ಲಿ ಚರ್ಚೆ ನಡೆದು ಅನುಷ್ಠಾನ ಗೊಳಿಸಲಾಗುತ್ತದೆ ಎಂಬುದರ ಬಗ್ಗೆ ಯುವ ಸಮುದಾಯಕ್ಕೆ ಪರಿಚಯ ಮಾಡಿಕೊಡುವ ಉದ್ದೇಶದಿಂದ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಇದನ್ನು ವ್ಯವಸ್ಥಿತವಾಗಿ ಆಯೋಜಿಸ ಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತೀ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಯುವ ಸಂಸತ್ತು ಸಭೆ ನಡೆಯಲಿದ್ದು, ತಾಲೂಕಿನಲ್ಲಿ ಆಯ್ದ ವಿದ್ಯಾರ್ಥಿ ಗಳು ಜಿಲ್ಲಾ ಮಟ್ಟದ ಯುವಸಂಸತ್ತು ಸಭೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಈ ಸಭೆಯಲ್ಲಿ ಅತ್ಯುತ್ತಮ ವಾಗಿ ಚರ್ಚೆಯಲ್ಲಿ ಪಾಲ್ಗೊಂಡ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ, ನವೆಂಬರ್ 3ರ ಒಳಗೆ ರಾಜ್ಯ ಮಟ್ಟದ ಯುವ ಸಂಸತ್ತು ಸಭೆಗೆ ಕಳುಹಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಯುವ ಸಂಸತ್ತುಸಭೆಗಳನ್ನು ಜಿಲ್ಲಾ ವಕೀಲರ ಸಂಘದ ಸಮನ್ವಯದೊಂದಿಗೆ ಆಯೋಜಿಸಬೇಕು. ಜಿಲ್ಲಾ ಮಟ್ಟದ ಯುವಸಂಸತ್ತು ಸಭೆಗೆ ದಿನವನ್ನು ನಿಗದಿಪಡಿಸಿ, ಸೂಕ್ತ ಸ್ಥಳವನ್ನು ಆಯ್ಕೆ ಮಾಡಿ, ಸಭೆಯಲ್ಲಿ ಚರ್ಚಿಸಲಾಗುವ ವಿಷಯಗಳ ಬಗ್ಗೆ ಮೊದಲೇ ವಿದ್ಯಾರ್ಥಿಗಳಿಗೆ ತಿಳಿಸಿರಬೇಕು. ರಾಜ್ಯ ವಿಧಾನಸಭೆಯ ಮಾದರಿಯಲ್ಲಿ ವಿದ್ಯಾರ್ಥಿ ಗಳನ್ನೊಳಗೊಂಡ ಯುವ ಸಂಸತ್ತು ಸಭೆಯನ್ನು ಆಯೋಜಿಸಬೇಕು ಎಂದರು.
ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಬೆಳಗ್ಗೆ 10 ಗಂಟೆಗೆ ನಾಡಗೀತೆಯೊಂದಿಗೆ ಅಧಿವೇಶನವನ್ನು ಪ್ರಾರಂಭಿಸಬೇಕು. ಪೀಠಿಕೆ ವಾಚನ, ಪ್ರಶ್ನೋತ್ತರ ವೇಳೆ, ಶೂನ್ಯ ವೇಳೆ, ಗಮನ ಸೆಳೆಯುವ ಸೂಚನೆ, ತುರ್ತು ವಿಷಯದ ಮೇಲಿನ ಚರ್ಚೆ, ವಿಧೇಯಕಗಳ ಮಂಡನೆ, ವಿಧೇಯಕಗಳ ಮೇಲಿನ ಚರ್ಚೆ, ಅವುಗಳ ಅಂಗೀಕಾರ, ಸಭೆಯ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ, ರಾಷ್ಟ್ರಗೀತೆ ಪ್ರಸಾರವನ್ನು ಒಳಗೊಂಡಿರುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ಕುಮಾರ್, ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.






