ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಒಪ್ಪಿಸಲು ಆಗ್ರಹಿಸಿ ಧರಣಿ

ಉಡುಪಿ, ನ.4: ಹಿರಿಯಡ್ಕದ ಪ್ರದೀಪ್ ಪೂಜಾರಿ ಅವರ ಆತ್ಮಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.
ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ ಮಾತನಾಡಿ, ಪ್ರದೀಪ್ ಪೂಜಾರಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಒಟ್ಟು ಎಂಟು ಮಂದಿ ಆರೋಪಿಗಳಿದ್ದಾರೆ. ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ ಎಲ್ಲ ಆರೋಪಿಗಳ ಬಂಧನವಾಗಿಲ್ಲ. ಇಬ್ಬರು ಕಾರ್ಮಿಕರನ್ನು ಮಾತ್ರ ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಳು ಹಿರಿಯಡ್ಕದಲ್ಲೇ ಇದ್ದರೂ ಪೊಲೀಸರು ಅವರನ್ನು ಬಂಧಿಸಲು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಪ್ರದೀಪ್ ಪೂಜಾರಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ ಸಂದರ್ಭದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಆದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಹಾಗೂ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆಯೂ ತನಿಖೆಯಾಗಬೇಕು. ಪ್ರದೀಪ್ ಅವರ ಸಾವಿಗೆ ಸಂಬಂಧಿಸಿದಂತೆ ಹಿರಿಯಡ್ಕ ಠಾಣಾಧಿಕಾರಿಗಳು ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡಿರುವುದು ಪೊಲೀಸರ ಕರ್ತವ್ಯಲೋಪವನ್ನು ಎತ್ತಿತೋರಿಸುತ್ತದೆ ಎಂದು ದೂರಿದರು.
ಜಿಲ್ಲಾ ಪೊಲೀಸರಿಂದ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರೆಯುವ ವಿಶ್ವಾಸವಿಲ್ಲ. ಹೀಗಾಗಿ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಬೇಕು. ಹಿರಿಯಡ್ಕ ಠಾಣಾಧಿಕಾರಿಗಳಿಗೆ ಸಹಕರಿಸಿದ ಸಿಬ್ಬಂದಿ ಹಾಗೂ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಬಳಿಕ ಸ್ಥಳಕ್ಕೆ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಈ ಕುರಿತ ಮನವಿ ಸಲ್ಲಿಸಲಾಯಿತು. ಧರಣಿಯಲ್ಲಿ ಶಾಸಕ ಯಶಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು, ವಿಶ್ವ ಹಿಂದೂ ಪರಿಷತ್‌ನ ಸುನಿಲ್ ಕೆ.ಆರ್., ಗೀತಾಂಜಲಿ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.






