ಉಚ್ಚಿಲಕ್ಕೆ ಅ.12ರಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ; ಡಿಸಿ, ಎಸ್ಪಿಯಿಂದ ಸಿದ್ಧತೆ ಪರಿಶೀಲನೆ

ಉಚ್ಚಿಲ, ಅ.10: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅ.12ರ ಸೋಮವಾರದಂದು ಕಾಪು ತಾಲೂಕಿನ ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಆವರಣದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಮಹಾಲಕ್ಷ್ಮಿ ದೇವಸ್ಥಾನದ ವತಿಯಿಂದ ಆಯೋಜಿಸಿರುವ ಅಭಿನಂದನಾ ಸಮಾರಂಭ ಹಾಗೂ ಅಲ್ಲಿ ನಡೆಯುವ ಮಹಿಳಾ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಪೂರ್ವ ತಯಾರಿ ಬಗ್ಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ನಾಯಕ್, ನಾಡೋಜ ಜಿ.ಶಂಕರ್, ದಕ್ಷಿಣ ಕನ್ನಡ ಮೊಗವೀರ ಮಹಾ ಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೆಂಗ್ರೆ, ಗೌರವ ಕಾರ್ಯದರ್ಶಿ ಶರಣ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳ ಪ್ರವಾಸ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅ.12ರಂದು ಅಪರಾಹ್ನ 1:30ಕ್ಕೆ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ 3:00ಗಂಟೆಗೆ ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ 3:40ಕ್ಕೆ ಉಚ್ಚಿಲ ದೇವಸ್ಥಾನಕ್ಕೆ ಆಗಮಿಸ ಲಿದ್ದು, ಅಭಿನಂದನಾ ಸಮಾರಂಭ ಹಾಗೂ ಮಹಿಳಾ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಬಳಿಕ ಸಂಜೆ 5:00ಗಂಟೆಗೆ ಉಚ್ಚಿಲ ಮಹಾಲಕ್ಷ್ಮೀ ನಗರದಿಂದ ರಸ್ತೆ ಮೂಲಕ ಮಂಗಳೂರಿನ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿ ಅಲ್ಲಿ 6:00ಗಂಟೆಗೆ ನಡೆಯುವ ‘ಮಂಗಳೂರು ದಸರಾ 2026 ನವರಾತ್ರಿ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ರಸ್ತೆ ಮೂಲಕ ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.






