ಉಡುಪಿ ಜಿಲ್ಲೆಯಲ್ಲಿ 154 ಹೊಸ ಪೌರ ಕಾರ್ಮಿಕರ ನೇಮಕ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಉಡುಪಿ, ಡಿ.19: ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 154 ಮಂದಿ ಪೌರ ಕಾರ್ಮಿಕರನ್ನು ಹೊಸದಾಗಿ ನೇಮಿಸಿಕೊಳ್ಳ ಲಾಗಿದೆ. ಇನ್ನೂ 10 ಮಂದಿ ಕಾರ್ಮಿಕರ ನೇಮಕಕ್ಕೆ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಪರಿಶೀಲನೆಯ ನಂತರ ಶೀಘ್ರವಾಗಿ ಅವರನ್ನೂ ಪೌರ ಕಾರ್ಮಿಕರಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಫಾಯಿ ಕರ್ಮಚಾರಿ ಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಮ್ಯಾನ್ಯುಯಲ್ ಸ್ಕ್ಯಾಂವೆಂಜಿಂಗ್ ಕೆಲಸದಲ್ಲಿ ಯಾವುದೇ ವ್ಯಕ್ತಿಯನ್ನು ತೊಡಗಿಸಿಕೊಳ್ಳುವುದಕ್ಕೆ ನಿರ್ಬಂಧವಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಡಾ.ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮ್ಯಾನ್ಯುಯಲ್ ಸ್ಕ್ಯಾಂವೆಂಜಿಂಗ್ ದೇಶದಲ್ಲಿಯೇ ನಿಷೇಧಿತ ಚಟುವಟಿಕೆ ಯಾಗಿದ್ದು, ಈ ಕೆಲಸಕ್ಕೆ ಯಾವುದೇ ವ್ಯಕ್ತಿಯನ್ನು ಬಳಸಿಕೊಂಡರೆ, ಅಂಥವರ ವಿರುದ್ಧ ಮ್ಯಾನ್ಯುಯಲ್ ಸ್ಕ್ಯಾಂವೆಂಜರ್‌ಗಳಾಗಿ ಉದ್ಯೋಗದ ನಿಷೇಧ ಹಾಗೂ ಅವರ ಪುನರ್ವಸತಿ ಕಾಯ್ದೆ 2013ರ ಸೆಕ್ಷನ್ 8ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು. ಅಪರಾಧ ಸಾಬೀತಾದಲ್ಲಿ 2 ವರ್ಷ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಲು ಅವಕಾಶವಿದೆ. ಹೀಗಾಗಿ ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದಿರಬೇಕು ಎಂದು ಅವರು ನುಡಿದರು.
ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳ ಮೂಲಕವೇ ಶೌಚಗುಂಡಿಗಳನ್ನು ಸ್ವಚ್ಛಗೊಳಿಸಿ, ಅದನ್ನು ಸೂಕ್ತ ರೀತಿಯಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದ ಅವರು, ಇತರೆ ಸ್ವಚ್ಛತಾ ಕಾರ್ಯಗಳನ್ನು ಸಾಧ್ಯವಾದಷ್ಟು ಯಂತ್ರಗಳ ಸಹಾಯದಿಂದ ಮಾಡಲು ಮುಂದಾಗಬೇಕು ಎಂದರು.
ಸ್ವಚ್ಛತಾ ಕಾರ್ಮಿಕರು ಕಡ್ಡಾಯವಾಗಿ ಸುರಕ್ಷತಾ ಪರಿಕರಗಳನ್ನು ಬಳಸುವುದರೊಂದಿಗೆ ಸ್ವಚ್ಛತೆ ಕೈಗೊಳ್ಳಬೇಕು. ಒಂದೊಮ್ಮೆ ಬರಿಗೈಯಿಯಿಂದ ಸ್ವಚ್ಛತೆ ಮಾಡಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಜಿಲ್ಲಾಧಿಕಾರಿ, ಪೌರ ಕಾರ್ಮಿಕರಿಗೆ ಅತ್ಯುತ್ತಮ ಗುಣಮಟ್ಟದ ಸುರಕ್ಷತಾ ಪರಿಕರಗಳನ್ನು ಒದಗಿಸಬೇಕು. ಕಾಲಕಾಲಕ್ಕೆ ಅವರುಗಳ ಸಾಮಾನ್ಯ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್‌ಅಪ್‌ಗಳನ್ನು ಮಾಡಿಸಬೇಕು ಹಾಗೂ ಅವರುಗಳಿಗೆ ಉತ್ತಮ ಗುಣಮಟ್ಟದ ಉಪಾಹಾರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರಕಾರ ಮ್ಯಾನ್ಯುಯಲ್ ಸ್ಕ್ಯಾಂವೆಂಜರ್ ಪುನರ್ವಸತಿಗಾಗಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮ ಗಳ ಬಗ್ಗೆ ಪೌರಕಾರ್ಮಿಕರಿಗೆ ಅರಿವು ಮೂಡಿಸುವುದರೊಂದಿಗೆ ಅವರುಗಳನ್ನು ಅರ್ಹ ಫಲಾನುಭವಿಗಳನ್ನಾಗಿಸಲು ಎಲ್ಲರೂ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರುಗಳು ಇಂದಿನ ಸಭೆಯಲ್ಲಿ ಉಪಸ್ಥಿತರಿದ್ದರು.







