ಅ. 17 : ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ

ಉಡುಪಿ, ಅ.16: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ಅಕ್ಟೋಬರ್ 17ರ ಶನಿವಾರ ನಡೆಯಲಿವೆ.
ಅ.17ರಂದು ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಬಜಗೋಳಿಯ ಶ್ರೀಬ್ರಹ್ಮಶ್ರೀನಾರಾಯಣ ಗುರು ಸಮುದಾಯ ಭವನದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ, ಬೈಂದೂರು ತಾಲೂಕು ನಾಡ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆಯಲ್ಲಿ, ಉದ್ಯಾವರದ ನಾರಾಯಣಗುರು ಸಭಾಭವನ ದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಕುಂದಾಪುರ ತಾಲೂಕು ಹೊಂಬಾಡಿ- ಮಂಡಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಹಾಗೂ ಉಪ್ಪೂರು ಗ್ರಾಮದ ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ್ನ ಸೌಹಾರ್ದ ಸಭಾಭವನದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ.
ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳು ಸೇರಿದಂತೆ ಸರಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.




