ಸೆ. 19ರಂದು ತಾಲೂಕು, ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ

ಉಡುಪಿ, ಸೆ.17: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಿಧಾನಸಭಾ ಕ್ಷೇತ್ರದ ಶಾಸಕರುಗಳ ನೇತೃತ್ವದಲ್ಲಿ ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ಸೆಪ್ಟಂಬರ್ 19ರಂದು ನಡೆಯಲಿವೆ.
ಕಾಪು ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯು ಸೆ.19 ರಂದು ಬೆಳಗ್ಗೆ 10 ಗಂಟೆಗೆ ಕಾಪು ತಾಲೂಕು ಕಚೇರಿ ಸಭಾಂಗಣದಲ್ಲಿ ರಾಜ್ಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಅಧ್ಯಕ್ಷತೆಯಲ್ಲಿ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತಿಯಲ್ಲಿ ನಡೆಯಲಿದೆ.
ಹೋಬಳಿ/ಗ್ರಾಮ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ಸೆ.19 ರಂದು ಬೆಳಗ್ಗೆ 10 ಗಂಟೆಗೆ ಕುಂದಾಪುರದ ಜೂನಿಯರ್ ಕಾಲೇಜು ಬಳಿಯ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ, ಮರವಂತೆ ಗ್ರಾಮದ ಗ್ರಾಪಂ ಸಭಾಭವನದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆಯಲ್ಲಿ, ಕಾರ್ಕಳ ಮಿಯಾರು ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಕಾರ್ಕಳ ಶಾಸಕ ಸುನಿಲ್‌ಕುಮಾರ್ ಅಧ್ಯಕ್ಷತೆಯಲ್ಲಿ ಹಾಗೂ ಬ್ರಹ್ಮಾವರದ ಹಾವಂಜೆ ಗ್ರಾಮದ ಗ್ರಾಪಂನ ಸಭಾಭವನದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯಲಿವೆ.
ಸಾರ್ವಜನಿಕರು ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.






