ಉಡುಪಿ: ಅ.2ರಂದು ಅಲ್ಲಲ್ಲಿ ಗಾಂಧಿ ಜಯಂತಿ

ಜಿಲ್ಲಾ ಕಾಂಗ್ರೆಸ್: ಬ್ರಹ್ಮಗಿರಿಯಲ್ಲಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನ ದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅ.2ರಂದು ಬೆಳಿಗ್ಗೆ 10:00 ಗಂಟೆಗೆ ಗಾಂಧಿ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ಕಾಲೇಜು: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ‘ಕಾರಂತರ ಚಿಂತನೆಯಲ್ಲಿ ಗಾಂಧೀಜಿ’ ಕಾರ್ಯಕ್ರಮವನ್ನು ಅ.2ರಂದು ಬೆಳಿಗ್ಗೆ 10 ಗಂಟೆಗೆ ಎಂಜಿಎಂ ಕಾಲೇಜಿನ ಪಿ.ಜಿ.ಎ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಉದ್ಘಾಟಿಸಲಿದ್ದು, ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ. ಬಾರ್ಕೂರು ಎಸ್.ಆರ್.ಎಸ್. ಎಂ.ಎನ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾಪಕ ಡಾ.ಪ್ರಸಾದ್ ರಾವ್ ಉಪನ್ಯಾಸ ನೀಡಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
ಗಾಂಧಿ ಅಧ್ಯಯನ ಕೇಂದ್ರ: ಎಂ.ಜಿ.ಎಂ. ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ ಅಕ್ಟೋಬರ್ 2ರಂದು ಗಾಂಧಿ ಜಯಂತಿ, ಲಾಲ್‌ಬಹದ್ದೂರ್ ಶಾಸ್ತ್ರಿ ಜನ್ಮದಿನ ಹಾಗೂ ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನು ಆಚರಿಸಲಾಗುವುದು. ಅಂದು ಬೆಳಗ್ಗೆ 9:00ರಿಂದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಕಾರ್ಯಕ್ರಮಗಳು ನಡೆಯಲಿದೆ.
ಮುಂಜಾನೆ 9:00 ಗಂಟೆಗೆ ಕಾಲೇಜಿನ ವಿದ್ಯಾರ್ಥಿಗಳಿಂದ ರಾಮ್‌ಧುನ್ ಹಾಗೂ ಗಾಂಧೀಜಿಗೆ ಪ್ರಿಯವಾಗಿದ್ದ ಭಜನೆಗಳ ಗಾಯನ ನಡೆಯಲಿದೆ. 9:30ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಂಗಳೂರಿನ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ರೀಡರ್ ಓ.ಆರ್.ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ.ಗಾಯತ್ರಿ ಜಿ.ಪೈ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಎಂಜಿಎಂ ಕಾಲೇಜಿನ ಉಪ ಪ್ರಾಂಶುಪಾಲ ಡಾ ವಿಶ್ವನಾಥ ಪೈ ಎಂ, ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ಎಸ್. ನಾಯ್ಕ, ಎಂಜಿಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಾಲತಿ ದೇವಿ ಉಪಸ್ಥಿತರಿರುವರು ಎಂದು ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






