ಉಡುಪಿ: ಡಿ.5 - 6ರಂದು ಮಂಗಳೂರು ವಿವಿ ಅಂತರ ಕಾಲೇಜು ಅಥ್ಲೆಟಿಕ್ ಚಾಂಪಿಯನ್ಶಿಪ್

ಸಾಂದರ್ಭಿಕ ಚಿತ್ರ
ಉಡುಪಿ, ಡಿ.2: ಮಂಗಳೂರು ವಿವಿ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್ಷಿಪ್ ಉಡುಪಿಯ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.5 ಮತ್ತು 6ರಂದು ನಡೆಯಲಿದೆ ಎಂದು ಕ್ರೀಡಾಕೂಟದ ಸಂಚಾಲಕ ಡಾ.ರೋಷನ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಪುರುಷರ ವಿಭಾಗದಲ್ಲಿ ಸೈಂಟ್ ಫಿಲೋಮಿನಾ ಕಾಲೇಜು ಅಸೋಸಿಯೇಷನ್ ಟ್ರೋಫಿ ಹಾಗೂ ಮಹಿಳಾ ವಿಭಾಗದಲ್ಲಿ ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್ ಟ್ರೋಫಿಗಾಗಿ ವಿವಿಧ ಕಾಲೇಜುಗಳ ಪುರುಷ ಮತ್ತು ಮಹಿಳಾ ತಂಡಗಳು ಸೆಣಸಲಿವೆ.
ಕ್ರೀಡಾಕೂಟವನ್ನು ಡಿ.5ರ ಬೆಳಗ್ಗೆ 9:30ಕ್ಕೆ ಮಂಗಳೂರು ವಿವಿ ರಿಜಿಸ್ಟ್ರಾರ್ ರಾಜು ಕೆ. ಅವರು ಉದ್ಘಾಟಿಸಲಿದ್ದು, ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಆಳ್ವ, ಅಂತಾರಾಷ್ಟ್ರೀಯ ಕ್ರೀಡಾಪಟು, ಏಕಲವ್ಯ ಪ್ರಶಸ್ತಿ ವಿಜೇತ ರೋಹಿತ್ಕುಮಾರ್ ಕಟೀಲ್ ಹಾಗೂ ರೋಹಿತ್ ಹೆಗ್ಡೆ ಎರ್ಮಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ಡಿ.6ರ ಸಂಜೆ 4ಗಂಟೆಗೆ ನಡೆಯುವ ಸಮಾರೋಪ ಸಮಾರಂಭ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಾಹೆಯ ಪ್ರೊ ವೈಸ್ ಚಾನ್ಸಲರ್ ಡಾ.ಶರತ್ ಕೆ.ರಾವ್, ಉದ್ಯಮಿ ಹರಿಯಪ್ಪ ಕೋಟ್ಯಾನ್, ನಿರುಪಮಾ ಪ್ರಸಾದ್ ಶೆಟ್ಟಿ, ಭಾರತಿ ಹರೀಶ್ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ವಿಕಲಚೇತನರ ಅಥ್ಲೆಟಿಕ್ ಕೂಟ: ಮಂಗಳೂರು ವಿವಿ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಯುವಜನಸೇವಾ ಹಾಗೂ ಕ್ರೀಡಾ ಇಲಾಖೆ, ತೆಂಕ ನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕೂಟ ಹಾಗೂ ಮಂಗಳೂರು ವಿವಿ ಅಂತರ ಕಾಲೇಜು ಪುರುಷರ ಕಬಡ್ಡಿ ಟೂರ್ನಿ ಡಿ.4ರಂದು ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸ್ಪರ್ಧಾಕೂಟವನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಶಾಸಕ ಯಶಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಿದ್ದಾರೆ. ಸಮಾರೋಪ ಸಮಾರಂಭ ರಾತ್ರಿ 8ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.







