ಉಡುಪಿ: ಸೆ.7ರಂದು ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ

ಉಡುಪಿ, ಸೆ.6: ಆದರ್ಶ ಚಾರಿಟೇಬಲ್ ಟ್ರಸ್ಟ್ ಉಡುಪಿ, ಆದರ್ಶ ಕಾಲೇಜ್ ಆಫ್ ನರ್ಸಿಂಗ್, ಆದರ್ಶ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸಾಯನ್ಸ್, ಆದರ್ಶ ಪ್ಯಾರಾ ಮೆಡಿಕಲ್ ಕಾಲೇಜ್, ಆದರ್ಶ ಆಸ್ಪತ್ರೆ ಉಡುಪಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಡುಪಿ ಇವುಗಳ ಸಂಯುಕ್ತ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಾಧಕ ಶಿಕ್ಷಕರನ್ನು ಗುರುತಿಸಿ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಟ್ರಸ್ಟ್‌ನ ಸಿಇಓ ವಿಮಲಾ ಚಂದ್ರಶೇಖರ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಡುಪಿ ಜಿಲ್ಲೆಯ ಐದು ವಲಯಗಳ ಶಿಕ್ಷಕರಿಗೆ, ಪ್ರತಿ ವಲಯದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಮೂವರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಮೂವರು ಸೇರಿದಂತೆ ಒಟ್ಟು 30 ಮಂದಿಗೆ ಸಿಬಿಎಸ್‌ಸಿ ಶಾಲೆಗಳ ಐವರು ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.
ಸೆ.7ರ ರವಿವಾರ ಅಲೆವೂರು ಕೆಮ್ತೂರು ರಸ್ತೆಯಲ್ಲಿರುವ ಆದರ್ಶ ಸಮೂಹ ವಿದ್ಯಾಸಂಸ್ಥೆಗಳ ಸಂಕೀರ್ಣದಲ್ಲಿ ಬೆಳಗ್ಗೆ 9:30ಕ್ಕೆ ನಡೆಯುವ ಸಮಾರಂಭವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಉದ್ಘಾಟಿಸಲಿದ್ದು, ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು, ಅಲೆವೂರು ಗ್ರಾಪಂ ಅಧ್ಯಕ್ಷ ಯತೀಶ್, ಉಡುಪಿ ಎಪಿಎಲ್ ಅಧ್ಯಕ್ಷ ಡಾ.ಸುರೇಶ್ ಹೆಗ್ಡೆ ಪಾಲ್ಗೊಳ್ಳಲಿದ್ದಾರೆ ಎಂದರು.
ಆದರ್ಶ ಆಸ್ಪತ್ರೆಯ ನಿರ್ದೇಶಕ ಡಾ.ಸುಹಾಸ್ ಜಿ.ಸಿ., ಆದರ್ಶ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಸುದೀನಾ, ಅಲೈಡ್ ಹೆಲ್ತ್ ಸಾಯನ್ಸ್‌ನ ಪ್ರಾಂಶುಪಾಲ ಪ್ರೊ.ರವಿಕುಮಾರ್ ಅವರು ಸಹ ಈ ವೇಳೆ ಉಪಸ್ಥಿತರಿರುವರು ಎಂದು ವಿಮಲಾ ಚಂದ್ರಶೇಖರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಆದರ್ಶ ಆಸ್ಪತ್ರೆಯ ಮ್ಯಾನೇಜರ್ ಡಿಯೋಗೊ ಕ್ವಾಡ್ರಸ್, ಸಹ ಸಿಇಓ ಡಾ.ಪ್ರಶಾಂತ್ ಪೈ ಉಪಸ್ಥಿತರಿದ್ದರು.







