13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಡುಪಿ, ಜೂ.18: ಮಲ್ಪೆ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕಸಬಾ ಹೋಬಳಿಯ ಬಿಡಗನಹಳ್ಳಿ ಗ್ರಾಮದ ಮಧು ಯಾನೆ ಉಮೇಶ್ ಎಂದು ಗುರುತಿಸಲಾಗಿದೆ. ಮಲ್ಪೆ ಪೊಲೀಸ್ ಠಾಣೆಯ ವಾರಂಟ್ ಸಿಬ್ಬಂದಿಗಳಾದ ವಿಶ್ವನಾಥ್ ಹೆಚ್. ಹಾಗೂ ಮಹಮ್ಮದ್ ರಫಿ ಅವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಆರೋಪಿಯನ್ನು ಬಂಧಿಸಿ ಮಲ್ಪೆಗೆ ಕರೆತಂದಿದ್ದಾರೆ.
ಆರೋಪಿ ಮಧು ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ದೇವಸ್ಥಾನ ಕಳವು ಪ್ರಕರಣ, ಕಾಪು ಪೊಲೀಸ್ ಠಾಣೆಯಲ್ಲಿ ಒಂದು ದೇವಸ್ಥಾನದಲ್ಲಿ ಕಳವು, ಬೆಂಗಳೂರು ನಗರದಲ್ಲಿ ಎರಡು ಹಲ್ಲೆ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ಜೂನ್ 29ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಆತನನ್ನು ಹಿರಿಯಡ್ಕ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಮಲ್ಪೆ ಠಾಣೆಯ ಪಿಎಸ್‌ಐ ತಿಳಿಸಿದ್ದಾರೆ.






