ಸೆ.27: ಸರಕಾರಿ ಪದವಿ ವಿದ್ಯಾರ್ಥಿಗಳ ಸ್ವಯಂಪ್ರೇರಿತ ತರಗತಿ ಬಹಿಷ್ಕಾರ

ಉಡುಪಿ, ಸೆ.17: ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಷಯದಲ್ಲಿ ಸರಕಾರ ವಿಳಂಬ ಮಾಡುತ್ತಿದ್ದು, ಇದರಿಂದ ಸಾವಿರಾರು ಪದವಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಈ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ, ಸರಕಾರ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡಿಲ್ಲ. ಇದನ್ನು ಖಂಡಿಸಿ, ಎಐಡಿಎಸ್‌ಓ ಕರ್ನಾಟಕ ರಾಜ್ಯ ಸಮಿತಿ ಸೆ.27ರಂದು ರಾಜ್ಯದ ಎಲ್ಲಾ ಸರಕಾರಿ ಪದವಿ ವಿದ್ಯಾರ್ಥಿಗಳಿಗೆ ಸ್ವಯಂಪ್ರೇರಿತ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದೆ.
ಕಳೆದ ಎರಡು ತಿಂಗಳಿಂದ ಸರಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ಪಾಠ ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ. ಇದೇ ಅವಧಿಯಲ್ಲಿ ಖಾಸಗಿ ಕಾಲೇಜುಗಳಲ್ಲಿ ಪಠ್ಯಕ್ರಮ, ಘಟಕ ಪರೀಕ್ಷೆಗಳು ಮುಗಿದು, ಸೆಮಿಸ್ಟರ್ ಪರೀಕ್ಷೆಗೆ ಸಿದ್ಧತೆ ನಡೆಯುತ್ತಿದೆ. ಆದರೆ, ಬಡ ಮತ್ತು ಗ್ರಾಮೀಣ ಹಿನ್ನಲೆಯ ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುವಂತಾಗಿದೆ ಎಂದು ಎಐಡಿಎಸ್‌ಓ ಜಿಲ್ಲಾ ಸಂಚಾಲಕ ವಿನಯಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಎಐಡಿಎಸ್‌ಓ ರಾಜ್ಯ ಸಮಿತಿ ಗಂಭೀರ ಕಳವಳ ವ್ಯಕ್ತಪಡಿಸಿದೆ. ಸರಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ಪರಿಗಣಿಸುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಯುಜಿಸಿ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಲ್ಲ. ಸರಕಾರ ಬಯಸಿದರೆ ಈ ಬಿಕ್ಕಟ್ಟನ್ನು ತಕ್ಷಣವೇ ಪರಿಹರಿ ಸಬಹುದು. ಆದರೆ, ಸರಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಎಐಡಿಎಸ್‌ಓ ಆರೋಪಿಸಿದೆ.
ಕಳೆದ ಕೆಲವು ವಾರಗಳಿಂದ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 5,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಸರಕಾರದ ನಿರ್ಲಕ್ಷ್ಯಧೋರಣೆ ಮುಂದುವರಿದಿದೆ. ಹೀಗಾಗಿ, ತಮ್ಮ ಶಿಕ್ಷಣದ ಹಕ್ಕನ್ನು ರಕ್ಷಿಸಿಕೊಳ್ಳಲು ವಿದ್ಯಾರ್ಥಿಗಳು ಈ ಹೋರಾಟವನ್ನು ತೀವ್ರಗೊಳಿಸಿದ್ದು, ತರಗತಿ ಬಹಿಷ್ಕಾರಕ್ಕೆ ಮುಂದಾಗಿ ದ್ದಾರೆ. ತಮ್ಮ ಭವಿಷ್ಯದ ಬಗ್ಗೆ ಸರಕಾರಕ್ಕೆ ಒಂದು ಸ್ಪಷ್ಟ ಸಂದೇಶ ಕಳುಹಿಸಲು ಸಜ್ಜಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಖಾಸಗಿ - ಸರಕಾರಿ ಕಾಲೇಜುಗಳ ವಿದ್ಯಾರ್ಥಿಗಳ ನಡುವಿನ ಅಸಮಾನತೆಗೆ ಕಾರಣವಾಗಿರುವ ರಾಜ್ಯ ಸರಕಾರದ ನಿಲುವನ್ನು ಎಐಡಿಎಸ್‌ಓ ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ವಿನಯ್‌ಚಂದ್ರ ಹೇಳಿದ್ದಾರೆ.







