ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಉಡುಪಿ, ಜೂ.10: ರಾಜ್ಯದಲ್ಲಿ 0ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ ಜೂನ್ 28ರ ರವಿವಾರದಂದು ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ) ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ತಿಳಿಸಿದ್ದಾರೆ.
ಭಾರತವು ಕಳೆದ 14 ವರ್ಷಗಳಿಂದ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞರ ಸಲಹಾ ಗುಂಪಿನ ಶಿಫಾರಸ್ಸಿನಂತೆ ಈ ಅಭಿಯಾನವನ್ನು ನಡೆಸಲಾ ಗುತ್ತಿದೆ ಎಂದು ತಿಳಿಸಿದ್ದಾರೆ.
ಜೂ.28ರಂದು ಮೊದಲನೇ ದಿನ ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ನೀಡಲಾಗುತ್ತದೆ. ನಂತರದ 2ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳ ಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆ, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಂಬಂಧಪಟ್ಟವರಲ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.






