ನ.7: ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ

ಉಡುಪಿ, ನ.5: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ನವೆಂಬರ್ 7ರಂದು ನಡೆಯಲಿವೆ.
ನ.7ರಂದು ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ, ಬ್ರಹ್ಮಾವರದ ಐರೋಡಿ ಗ್ರಾಮದ ಚೇತನ ಪ್ರೌಢಶಾಲಾ ಸಭಾಂಗಣದಲ್ಲಿ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ, ಉಡುಪಿ ತಾಲೂಕು ಕಲ್ಯಾಣ ಪುರ ನೇಜಾರು ಮೂಡುತೋನ್ಸೆ ಗ್ರಾಮದ ಸಮುದಾಯ ಭವನದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆಯಲ್ಲಿ, ಕಾಪು ತಾಲೂಕು ಕಟಪಾಡಿ ಯೇಣಗುಡ್ಡೆ ಮೂಡಬೆಟ್ಟು ಗ್ರಾಮದ ಸೈಂಟ್ ಜೋನ್ಸ್ ಚರ್ಚ್ ಕಮ್ಯುನಿಟಿ ಹಾಲ್ನಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಹಾಗೂ ವಂಡ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ.
ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.




