ಮಣಿಪಾಲ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಆರೋಪ; ಎಸ್ಪಿ ಹರಿರಾಂ ಶಂಕರ್ ಸ್ಪಷ್ಟನೆ

ಉಡುಪಿ, ನ.19: ಕಳೆದ ದೀಪಾವಳಿಯ ದಿನದ ಘಟನೆಗೆ ಸಂಬಂಧಿಸಿದಂತೆ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಪೊಲೀಸರ ವಿರುದ್ಧ ಮಾಡಿರುವ ಆರೋಪಗಳ ಕುರಿತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ವಯಿಸಲಾದ ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಪ್ರಕರಣ ದಾಖಲಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ಎಫ್ಐಆರ್ ದಾಖಲಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ವಿಡಿಯೋ ದಾಖಲೆಗಳು ಹಾಗೂ ಸ್ಥಳದಲ್ಲಿದ್ದವರ ಹೇಳಿಕೆಗಳ ಆಧಾರದ ಮೇಲೆ ಕಾನೂನು ಉಲ್ಲಂಘನೆ ಮಾಡಿದ ಆರೋಪಿತರಿಗೆ ನೋಟೀಸು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಪೊಲೀಸರು ಹಾಸ್ಟೆಲ್ಗಳಿಗೆ ನುಗ್ಗಿ ಅತಿರೇಕದ ವರ್ತನೆ ತೋರಿದ್ದಾರೆ ಎಂಬ ವಿದ್ಯಾರ್ಥಿಗಳ ಆರೋಪಕ್ಕೆ ಸಂಬಂಧಿ ಸಿದಂತೆ ಸ್ಪಷ್ಟನೆ ನೀಡಿ, ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ತಮಗೆ ಈ ಬಗ್ಗೆ ಮನವಿ ಸಲ್ಲಿಸಿದ್ದು, ಇದರ ಕುರಿತಂತೆ ತನಿಖೆ ನಡೆಸಲು ಉಡುಪಿ ಡಿವೈಎಸ್ಪಿ ಅವರಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ತನಿಖಾಧಿಕಾರಿಯಾಗಿ ಮಣಿಪಾಲ ಠಾಣೆಯ ಪಿಎಸ್ಐ ಮುಂದುವರಿಯುವ ಬಗ್ಗೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಅವರ ಮನವಿ ಸ್ವೀಕರಿಸಿದ ದಿನವೇ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಅವರು ಸ್ಪಷ್ಟಪಡಿಸಿದ್ದಾರೆ.
ವಿದ್ಯಾರ್ಥಿಗಳ ಆರೋಪ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ತೀವ್ರತರದ ದೌರ್ಜನ್ಯದ ಆರೋಪ ಮಾಡಿದ್ದರು. ಸಾರ್ವಜನಿಕ ರಸ್ತೆಯಲ್ಲಿ ಯಾರೋ ಕಿಡಿಗೇಡಿಗಳು ಮಾಡಿದ ಕೃತಕ್ಕೆ, ಏನೂ ಸಂಬಂಧವಿಲ್ಲದ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬುದು ಅವರ ಆರೋಪವಾಗಿದೆ.
ವಿದ್ಯಾರ್ಥಿಗಳ ಫ್ಲಾಟ್ಗಳಿಗೆ ನುಗ್ಗಿದ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಗುರುತರ ಆರೋಪವನ್ನು ಮಾಡಿರುವ ವಿದ್ಯಾರ್ಥಿಗಳು ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ತಕ್ಷಣ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದರು. ನ.10ರಂದು ವಿದ್ಯಾರ್ಥಿಗಳ ಕೊಠಡಿಗಳಿಗೆ ನುಗ್ಗಿದ ಪೊಲೀಸರು ಪರೀಕ್ಷೆಗಾಗಿ ಓದುತಿದ್ದ ವಿದ್ಯಾರ್ಥಿಗಳ ಮೇಲೆ ನಿರಂತರ ಹಲ್ಲೆ ನಡೆಸಿದ್ದರು ಎಂದೂ ಅವರು ಆರೋಪಿಸಿದ್ದಾರೆ ಎಂದು ತಿಳಿದುಬಂದಿದೆ.






