ಕರಾವಳಿ ಅಭಿವೃದ್ಧಿ ಜೊತೆ ಕೋಮು ಸೌಹಾರ್ದತೆಗೆ ಒತ್ತು : ಗಫೂರ್

ಉಡುಪಿ : ಕರಾವಳಿ ಜಿಲ್ಲೆಗಳ ಅಭಿವೃದ್ಧಿ ಜೊತೆ ಇಲ್ಲಿನ ಕೋಮು ಸೌಹಾರ್ದತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು. ಉತ್ತರ ಕನ್ನಡ, ಉಡುಪಿ, ದ.ಕ. ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ವರದಿಯನ್ನು ಮೂರು ತಿಂಗಳೊಳಗೆ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದ್ದಾರೆ.
ಉಡುಪಿ ಜಾಮೀಯ ಮಸೀದಿಯಲ್ಲಿ ಸೋಮವಾರ ಮಸೀದಿ ಆಡಳಿತ ಮಂಡಳಿ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತಿದ್ದರು. ಎರಡು ಮೂರು ದಿನಗಳಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ನನ್ನ ಜವಾಬ್ದಾರಿಯನ್ನು ಅರಿತುಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದರು.
ಕರಾವಳಿ ಜಿಲ್ಲೆಯ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕರಾವಳಿ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು. ಇದರಲ್ಲಿ ಬೀಚ್ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಜನರ ಸೇವೆ ನೀಡುವ ನಿಟ್ಟಿನಲ್ಲಿ ನನಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಅದಕ್ಕೆ ತಕ್ಕಂತೆ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಸೀದಿಯ ಅಧ್ಯಕ್ಷ ರಿಯಾಝ್ ಅಹ್ಮದ್, ಕಾರ್ಯದರ್ಶಿ ಖಾಲಿದ್, ಉಪಾಧ್ಯಕ್ಷ ವಿ.ಎಸ್.ಉಮರ್, ಖಜಾಂಚಿ ಶಾಹಿದ್ ಅಲಿ, ಸಮಿತಿ ಸದಸ್ಯರಾದ ಸಾಧಿಕ್ ಅಬು ಹಾಜಿ, ಮುಸ್ತಫಾ, ಇಫ್ತಿಕಾರ್, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಉಪಸ್ಥಿತರಿದ್ದರು.







