ಮಾನವ ಕಳ್ಳ ಸಾಗಾಣಿಕೆಯಿಂದ ಮಕ್ಕಳ ಶೋಷಣೆ: ನ್ಯಾ.ಶಾಂತವೀರ ಶಿವಪ್ಪ

ಉಡುಪಿ, ಜು.30: ಮಾನವ ಕಳ್ಳ ಸಾಗಾಣಿಕೆ ಮೂಲಕ ಮಕ್ಕಳನ್ನು ಅಪಾಯ ಕಾರಿ ಉದ್ದಿಮೆಗಳಲ್ಲಿ ಬಾಲ ಕಾರ್ಮಿಕರಾಗಿ ಹಾಗೂ ಮನೆಗೆಲಸ ಮತ್ತಿ ತರ ಕೆಲಸಗಳಿಗೆ ಬಳಕೆ ಮಾಡಲಾಗುತ್ತಿದ್ದು, ಇದನ್ನು ತಡೆಯಲು ವ್ಯಾಪಕ ಅರಿವು ಮೂಡಿಸುವುದು ಅಗತ್ಯವಿದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಪಟ್ಲದ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ರವಿವಾರ ಆಯೋಜಿಸಲಾದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಮಕ್ಕಳು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಾನವ ಕಳ್ಳ ಸಾಗಾಣಿಕೆಗೆ ಬಲಿಯಾಗುತ್ತಿದ್ದು, ಇದನ್ನು ತಡೆಯುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅಪರಾಧ ಕೃತ್ಯಗಳನ್ನು ಮಾಡಿದ ನಂತರ ಈ ಬಗ್ಗೆ ಕಾನೂನಿನ ಅರಿವು ಇಲ್ಲ ಎಂದು ಹೇಳುವ ಮೂಲಕ ಶಿಕ್ಷೆಯಿಂದ ತಪ್ಪಿಸಿ ಕೊಳ್ಳಲು ಸಾಧ್ಯವಿಲ್ಲ. ಮಾನವ ಕಳ್ಳ ಸಾಗಾಣಿಕೆಯು ಕಾನೂನಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದರು.
ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ವಹಿಸಿದ್ದರು. ಮಾನವ ಕಳ್ಳ ಸಾಗಾಣಿಕೆ, ಪೋಕ್ಸೋ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಉಪನ್ಯಾಸ ನೀಡಿದರು. ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ ನಾಯಕ್, ಮಕ್ಕಳಾ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ.ಪುರ್ಟಾಡೊ, ಉಡುಪಿ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕಿ ಜಯಾನಂದ, ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲ ಕೃಷ್ಣಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.