ಕರಾವಳಿಯ ಸರ್ವತೋಮುಖ ಅಭಿವೃದ್ಧಿಗೆ ಮಂಡಳಿ ಮೂಲಕ ಕ್ರಮ: ಎಂ.ಎ.ಗಫೂರ್

ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ರಾಜ್ಯ ಸರಕಾರ ರಾಜ್ಯ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಶಕ್ತಿ ನೀಡಿದೆ ಎಂದು ರಾಜ್ಯ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಮೊದಲ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸಿರುವ ಹಿನ್ನೆಲೆ ಯಲ್ಲಿ, ಮುಂದಿನ ದಿನಗಳಲ್ಲಿ ಮಂಡಳಿಗೆ ಹೆಚ್ಚು ಅನುದಾನ ಬಿಡುಗಡೆ ಆಗುವ ನಿರೀಕ್ಷೆ ಇದ್ದು, ಇದರಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ದೊರೆಯಲಿದೆ. ಕರಾವಳಿ ತೀರದ ಜಿಲ್ಲೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅಭಿಪ್ರಾಯ ಪಡೆದು ಯೋಜನೆ ರೂಪಿಸಿ ಅನುಷ್ಠಾನಗೊಳಿ ಸಲಾಗುವುದು ಎಂದವರು ಹೇಳಿದರು.
ಉಡುಪಿ ಜಿಲ್ಲೆಯ 5, ದಕ್ಷಿಣ ಕನ್ನಡದ 8 ಹಾಗೂ ಉತ್ತರ ಕನ್ನಡ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 19 ವಿಧಾನಸಭಾ ಕ್ಷೇತ್ರ ಗಳನ್ನೊಳಗೊಂಡಂತೆ ಕರಾವಳಿ ಅಭಿವೃದ್ಧಿ ಮಂಡಳಿ ರಚನೆ ಆಗಿದೆ. ಈ ಹಿಂದೆ ಮಲೆನಾಡು ಅಭಿವೃದ್ಧಿ ಮಂಡಳಿಯಲ್ಲಿ ಸೇರಿದ್ದ ಕಾರ್ಕಳ, ಬೆಳ್ತಂಗಡಿ, ಮೂಡಬಿದ್ರೆ, ಸುಳ್ಯ ಹಾಗೂ ಪುತ್ತೂರು ತಾಲೂಕುಗಳು ಇದೀಗ ಕರಾವಳಿ ಅಭಿವೃದ್ಧಿ ಮಂಡಳಿಗೆ ಸೇರ್ಪಡೆಗೊಂಡಿವೆ ಎಂದು ಗಫೂರ್ ವಿವರಿಸಿದರು.
ಕರಾವಳಿಯ ವಿವಿಧ ಅಭಿವೃದ್ಧಿ ಇಲಾಖೆಗಳು, ಜಿಲ್ಲಾ ಪಂಚಾಯತಿಗಳು ಮತ್ತು ಮಂಡಳಿಯಿಂದ ಮಾನ್ಯತೆ ಪಡೆದ ಸರ್ಕಾರೇತರ ಸಂಸ್ಥೆಗಳು ಯೋಜನೆಗೆ ಅನುಸಾರವಾಗಿ ರೂಪಿಸಿದ ಕಾರ್ಯಕ್ರಮಗಳನ್ನು ಮಂಡಳಿಯು ಅನುಮೋದಿಸಲಿದೆ. ಪೊಲೀಸ್ ಹಾಗೂ ನ್ಯಾಯಾಂಗ ಇಲಾಖೆಗಳನ್ನು ಹೊರತು ಪಡಿಸಿ ಉಳಿದವೆಲ್ಲ ಮಂಡಳಿಯ ವ್ಯಾಪ್ತಿಗೆ ಬರುತ್ತದೆ ಎಂದರು.
ಪ್ರಸ್ತುತ ಸಾಲಿನಲ್ಲಿ ಆಯವ್ಯಯದಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 10.50 ಕೋಟಿ ರೂ. ಮೊತ್ತದ ಅನುದಾನವನ್ನು ಕಾಯ್ದಿರಿಸಲಾಗಿದೆ. ಈ ವಾರ್ಷಿಕ ಸಾಲಿನ ಕ್ರಿಯಾ ಯೋಜನೆಯಲ್ಲಿ 10.82 ಕೋಟಿ ರೂ. ಮೊತ್ತದ ಒಟ್ಟು 153 ಅಭಿವೃದ್ಧಿ ಕಾಮಗಾರಿಗಳನ್ನು ಕ್ರಿಯಾ ಯೋಜನೆಯಲ್ಲಿ ಅನುಮೋದಿಸಲಾಗಿದೆ ಎಂದ ಅವರು, ಕಳೆದ ಸಾಲಿನ ಮುಂದುವರೆದ ಕಾಮಗಾರಿಗಳು ಪ್ರಗತಿಯಲ್ಲಿರು ವುದಾಗಿ ಸಭೆಗೆ ಮಾಹಿತಿ ನೀಡಿದರು.
ರಾಜ್ಯವು 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಹೊಂದಿರುವು ದರಿಂದ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮ, ಬಂದರು ಅಭಿವೃದ್ಧಿ, ಬೀಚ್‌ಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಹೆಚ್ಚಿನ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ಗಫೂರ್ ತಿಳಿಸಿದರು.
ಮುಂದಿನ ದಿನಗಳಲ್ಲಿ ಹಿನ್ನೀರು ಪ್ರದೇಶಗಳ ಸಂರಕ್ಷಣೆಯ ಜೊತೆಗೆ ಅಲ್ಲಿ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೆತ್ತಿಕೊಂಡು ಕಾರ್ಯರೂಪಕ್ಕೆ ತರುವುದರೊಂದಿಗೆ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ವಿಸ್ತರಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದೂ ಅವರು ವಿವರಿಸಿದರು.
ಉಡುಪಿ ಜಿಲ್ಲೆಯು ಧಾರ್ಮಿಕ ಕ್ಷೇತ್ರವಾಗಿರುವ ಕಾರಣ, ಹೊರ ಜಿಲ್ಲೆ, ರಾಜ್ಯ, ದೇಶಗಳಿಂದ ಸಾಕಷ್ಟು ಪ್ರವಾಸಿಗರು ಉಡುಪಿ ಜಿಲ್ಲೆಗೆ ಆಗಮಿ ಸುತಿದ್ದಾರೆ. ಇವರುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದ ಅವರು, ಬೀಚ್‌ಗಳ ಅಭಿವೃದ್ಧಿಗೆ ಗೋವಾ-ಕೇರಳ ಮಾದರಿಯನ್ನು ಅಳವಡಿಸಿಕೊಳ್ಳಲು ಚರ್ಚೆ ನಡೆಸಲಾಗುವುದು ಎಂದರು.
ಸಮಿತಿಯ ಸದಸ್ಯರಾಗಿರುವ ಉಡುಪಿಯ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಕರಾವಳಿ ಜಿಲ್ಲೆಗಳ ಕೇಂದ್ರ ಸ್ಥಾನ ಉಡುಪಿ ಆಗಿರುವುದರಿಂದ ಜಿಲ್ಲೆಯಲ್ಲಿ ಮಂಡಳಿಯ ಕೇಂದ್ರ ಕಚೇರಿಯನ್ನು ತೆರೆಯುವಂತೆ ಸಲಹೆ ನೀಡಿದರೆ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಜಿಲ್ಲೆಯಲ್ಲಿ ಶಾಶ್ವತ ಕಾಮಗಾರಿಗಳ ಕ್ರಿಯಾಯೋಜನೆ ತಯಾರಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯಲ್ಲಿ ಅಂತರ್ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ನಂದಿಕೂರು ಬೆಳಪು ಪರಿಸರದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಿರ್ಮಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು, ಅತ್ಯಾಧುನಿಕ ಮೂಲಭೂತ ಸೌಕರ್ಯದೊಂದಿಗೆ ಹೆಚ್ಚು ಪ್ರೇಕ್ಷಕರು ಆಸೀನರಾಗಲು ಹಾಗೂ ಸಾವಿರಾರು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಕೆಎಸ್‌ಸಿಎ ಪ್ರತಿನಿಧಿಗಳು ಸ್ಥಳ ಪರಿಶೀಲಿಸಿದ ನಂತರ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಮೊದಲ ಹಂತದಲ್ಲಿ ಓವರ್ ಹೆಡ್ ಮೆಟ್ರೋ ಕಾಮಗಾರಿ ಯೋಜನೆಯನ್ನು ಮಂಗಳೂರು-ಉಡುಪಿ-ಮಣಿಪಾಲ ಮಾರ್ಗವಾಗಿ ಹಾಗೂ ಎರಡನೇ ಹಂತದಲ್ಲಿ ಹೆಜಮಾಡಿ-ಕಾರ್ಕಳ ಮಾರ್ಗವಾಗಿ ಕೈಗೊಳ್ಳಲು ಯೋಜನೆ ರೂಪಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಸಭೆಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಮಂಡಳಿ ಕಾರ್ಯದರ್ಶಿ ಪ್ರದೀಪ್ ಡಿ ಸೋಜಾ ಹಾಗೂ ಸದಸ್ಯರು ಉಪಸ್ಥಿತರಿದ್ದರು.







