ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಡೇಕೇರ್ ಕಿಮೋಥೆರಪಿ ಕೇಂದ್ರ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಲಾದ ಡೇ ಕೇರ್ ಕಿಮೋ ಥೆರಪಿ ಕೇಂದ್ರವನ್ನು ಮೈಸೂರಿನಿಂದ ವರ್ಚುವಲ್ ಆಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ, ಮೈಸೂರು ಹೊರತು ಪಡಿಸಿ ಉಳಿದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್‌ಗಳ ಕೇಂದ್ರಗಳನ್ನು ತೆರೆಯಲಾಗಿದೆ. ಹಲವು ಜನ ಕ್ಯಾನ್ಸರ್ ಚಿಕಿತ್ಸೆಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕಿತ್ತು. ಇದನ್ನು ತಪ್ಪಿಸಲು ಆಯಾ ಜಿಲ್ಲಾ ಕೇಂದ್ರಗಳಲ್ಲಿಯೇ ಕಿಮೋ ಥೆರಪಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಬಡರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಸರಕಾರದ ವತಿಯಿಂದ ಡೇ ಕೇರ್ ಕಿಮೋ ಥೆರಪಿ ಕೇಂದ್ರವನ್ನು ಆರಂಭಿಸಲಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ಕಿಮೋ ಥೆರಪಿಯನ್ನು ಮಾಡಲು ಈಗ ಈ ಕೇಂದ್ರದಿಂದ ಅನುಕೂಲವಾಗಲಿದೆ. ಅದಕ್ಕೆ ಬೇಕಾದ ಎಲ್ಲ ಉಪಕರಣ ಗಳನ್ನು ಸರಕಾರ ಒದಗಿಸಿದೆ ಎಂದರು.
ಡೇ ಕೇರ್ ಕಿಮೋಥೆರಪಿ ಕೇಂದ್ರಗಳಲ್ಲಿ ನೋಂದಾಯಿತ ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಪ್ರಾರಂಭಿಕ ಚಿಕಿತ್ಸೆ ಪಡೆದು ನಂತರ ಮುಂದುವರೆದ ಕಿಮೋಥೆರಪಿ ಚಿಕಿತ್ಸೆಗಳನ್ನು ಈ ಡೇ ಕೇರ್ ಕೇಂದ್ರಗಳಲ್ಲಿ ನೀಡಲಾಗುತ್ತದೆ. ಡೇ ಕೇರ್ ಕಿಮೋಥೆರಪಿ ಕೇಂದ್ರಗಳಲ್ಲಿ ಒಬ್ಬ ವೈದ್ಯಕೀಯ ಆಂಕೋಲಾಜಿಸ್ಟ್, ಕಿಮೋಥೆರಪಿ ಚಿಕಿತ್ಸೆಯಲ್ಲಿ ತರಬೇತಿ ಪಡೆದ ಇಬ್ಬರು ದಾದಿಯರು ಸೇರಿದಂತೆ ಮತ್ತಿತರರು ಇರಲಿದ್ದಾರೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಅಶೋಕ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾನಾಗರತ್ನಾ, ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಧಿಕಾರಿ ಡಾ.ವಾಸುದೇವ್, ಶಸ್ತ್ರಚಿಕಿತ್ಸಕ ಡಾ.ಸುಜಿತ್, ಹಿರಿಯ ಕ್ಯಾನ್ಸರ್ ತಜ್ಞ ಡಾ.ವೆಂಕಟೇಶ್ ಮೊದಲಾದವರು ಉಪಸ್ಥಿತರಿದ್ದರು.







