ಕುಂದಾಪುರ: ಕೋಡಿ ಬ್ಯಾರೀಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಕುಂದಾಪುರ: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಮ್ಮಿಕೊಳ್ಳಲಾದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದ ಪ್ರವಾಚಕ ದಿವಾಕರ ಶೆಟ್ಟಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿಯ ಮುಳುಗು ತಜ್ಞ ಈಶ್ವರ ಮಲ್ಪೆ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕೊಡಲ್ಪಟ್ಟ ಸಮವಸ್ತ್ರವನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಾಸ ಮಂಡಳಿ ಸದಸ್ಯ ಡಾ.ಆಸೀಫ್ ಬ್ಯಾರಿ ವಿತರಿಸಿದರು.
ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟ ಗಾರರ ಅಣುಕು ಪ್ರದರ್ಶನ, ಭಾಷಣ ಹಾಗೂ ಸಮೂಹ ದೇಶಭಕ್ತಿ ಗೀತೆಗಳು ಜರಗಿದವು. ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರೆಹಮಾನ್ ಬ್ಯಾರಿ ವಹಿಸಿದ್ದರು.
ಹಾಜಿ ಕೆ ಮೋಹಿದ್ದಿನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಡಾ.ಜಯಶೀಲ ಶೆಟ್ಟಿ ಸ್ವಾಗತಿಸಿ, ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲೆ ಆಫ್ರಿನ್ ಖಾನ್ ವಂದಿಸಿದರು. ಕನ್ನಡ ಪ್ರಾಧ್ಯಾಪಕ ಸಂದೀಪ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.







