ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಕಾರ್ಕಳ: ಕಾರ್ಕಳ ತಾಲೂಕಿನ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕಾರ್ಕಳದ ಪ್ರಸಿದ್ಧ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಮ್ಮೇಳನಾಧ್ಯಕ್ಷರಾದ ಸಾಹಿತಿ ಹಾಗೂ ಪತ್ರಕರ್ತ ವಾಸುದೇವ ಭಟ್ ಸಿದ್ದಾಪುರ ಅವರ ಅಧ್ಯಕ್ಷತೆಯಲ್ಲಿ ಶುಭಾರಂಭಗೊಂಡಿತು.
ಸಮ್ಮೇಳನದ ಅಂಗವಾಗಿ ಪೂರ್ವಾಹ್ನ 8 ಗಂಟೆಗೆ ರಾಷ್ಟ್ರಧ್ವಜಾರೋಹಣವನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ-ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ನೆರವೇರಿಸಿದರು. ಕನ್ನಡ ಸಾಹಿತ್ಯ ಪರಿಷತ್ ಧ್ವಜಾರೋಹಣವನ್ನು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಿತಾ ಪೂಜಾರಿ ಉಪಸ್ಥಿತರಿದ್ದರು.
ಪುಸ್ತಕ ಮನೆಯಿಂದ ಜೋಡು ರಸ್ತೆಯ ಮೂಲಕ ಸಮ್ಮೇಳನಾಧ್ಯಕ್ಷರ ಗೌರವಪೂರ್ವಕ ಸ್ವಾಗತದೊಂದಿಗೆ ನಡೆದ ಮೆರವಣಿಗೆಯನ್ನು ಯಕ್ಷ ಕಲಾರಂಗ ಕಾರ್ಕಳದ ಅಧ್ಯಕ್ಷ ವಿಜಯ ಶೆಟ್ಟಿ ಉದ್ಘಾಟಿಸಿದರು.
ಕಾರ್ಕಳ ಜೋಡು ರಸ್ತೆಯ ಪುಸ್ತಕ ಮನೆಯಿಂದ ಹಿರ್ಗಾನ ಕ್ರಿಯೇಟಿವ್ ಕಾಲೇಜು ವರೆಗೆ ನಡೆದ ಕನ್ನಡ ಭುವನೇಶ್ವರಿ ಭವ್ಯ ಪುರಮೆರವಣಿಗೆಯಲ್ಲಿ ಕನ್ನಡತಾಯಿ ಭುವನೇಶ್ವರಿ ದೇವಿಯ ಶೋಭಾಯಾತ್ರೆ, ಸ್ಥಳೀಯ ಸಾಂಸ್ಕೃತಿಕ ತಂಡಗಳು, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು, ಚೆಂಡೆ ಹಾಗೂ ಗೊಂಬೆ ತಂಡಗಳು ಮೆರವಣಿಗೆಗೆ ವಿಶೇಷ ಮೆರಗು ನೀಡಿದವು.
ಈ ಸಂದರ್ಭದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹ-ಸಂಸ್ಥಾಪಕ ಅಶ್ವತ್ ಎಸ್.ಎಲ್., ಕಾರ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅವಿನಾಶ್ ಶೆಟ್ಟಿ, ಬೇಬಿ ಈಶ್ವರ ಮಂಗಳ, ಕಸಾಪ್ ಪದಾಧಿಕಾರಿಗಳಾದ ದೇವದಾಸ್ ಕೆರೆಮನೆ, ನಿತ್ಯಾನಂದ ಪೈ ಹಾಗೂ ಕ್ರಿಯೇಟಿವ್ ಕಾಲೇಜಿನ ಸಹ-ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ಉಪಸ್ಥಿತರಿದ್ದರು.







