ಕೊಂಕಣ ರೈಲ್ವೆ: ಟಿಕೆಟ್ ರಹಿತ ಪ್ರಯಾಣಿಕರಿಂದ 2.41 ಕೋಟಿ ರೂ. ದಂಡ ಸಂಗ್ರಹ

ಉಡುಪಿ, ಮಾ.14: ಟಿಕೆಟ್ ರಹಿತ ಪ್ರಯಾಣಿಕರ ಪತ್ತೆಗೆ ಕೊಂಕಣ ರೈಲು ಮಾರ್ಗದಲ್ಲಿ ಕೈಗೊಂಡಿರುವ ವಿಶೇಷ ಅಭಿಯಾನದಲ್ಲಿ ಕೊಂಕಣ ರೈಲ್ವೆ ನಿಗಮ ಕಳೆದ ಫೆಬ್ರವರಿ ತಿಂಗಳಿನಲ್ಲಿ 2.41 ಕೋಟಿ ರೂ.ಗಳನ್ನು ದಂಡ ಹಾಗೂ ಟಿಕೆಟ್ ಹಣದ ರೂಪದಲ್ಲಿ ಸಂಗ್ರಹಿಸಿದೆ.
ಜನವರಿ ತಿಂಗಳಲ್ಲಿ ಈ ಮೊತ್ತ 2.53 ಕೋಟಿ ರೂ.ಗಳಾಗಿತ್ತು ಎಂದು ಕೊಂಕಣ ರೈಲ್ವೆ ನಿಗಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಫೆಬ್ರವರಿ ತಿಂಗಳೊಂದರಲ್ಲೇ ಕೊಂಕಣ ರೈಲ್ವೆ ಮಾರ್ಗದಲ್ಲಿ ನಡೆಸಿದ 873 ವಿಶೇಷ ಟಿಕೆಟ್ ತಪಾಸಣಾ ಕಾರ್ಯಾ ಚರಣೆಯಲ್ಲಿ ಒಟ್ಟು 41,522 ಮಂದಿ ಟಿಕೆಟ್ ರಹಿತ ಹಾಗೂ ಅನಧಿಕೃತವಾಗಿ ಸಂಚರಿಸುವವರನ್ನು ಪತ್ತೆ ಹಚ್ಚಿರುವ ಸಿಬ್ಬಂದಿಗಳು ಅವರಿಂದ 2.41 ಕೋಟಿ ರೂ.ಗಳನ್ನು ದಂಡ ರೂಪದಲ್ಲಿ ಸಂಗ್ರಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಈ ಮೂಲಕ 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಫೆಬ್ರವರಿ ತಿಂಗಳ ಕೊನೆಯವರೆಗೆ ಒಟ್ಟು 10,368 ವಿಶೇಷ ಟಿಕೆಟ್ ತಪಾಸಣಾ ಕಾರ್ಯಾಚರಣೆ ನಡೆಸಲಾಗಿದ್ದು, ಈ ವೇಳೆ ಒಟ್ಟು 4,54,849 ಮಂದಿ ಟಿಕೆಟ್ ರಹಿತ ಹಾಗೂ ಅನಧಿಕೃತವಾಗಿ ಸಂಚರಿಸುವವರನ್ನು ಪತ್ತೆ ಹಚ್ಚಿ ಅವರಿಂದ ದಂಡದ ರೂಪದಲ್ಲಿ ಒಟ್ಟು 25.21 ಕೋಟಿ ರೂ. ಹಣವನ್ನು ರೈಲ್ವೆ ಖಜಾನೆಗೆ ಸಂಗ್ರಹಿಸಲಾಗಿದೆ ಎಂದೂ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕೊಂಕಣ ರೈಲ್ವೆ ಮಾರ್ಗದಲ್ಲಿ ಈ ವಿಶೇಷ ಕಾರ್ಯಾಚರಣೆಯನ್ನು ರೈಲ್ವೆ ಅಧಿಕಾರಿಗಳು ಹಾಗೂ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ನೆರವಿನಿಂದ ರೈಲುಗಳಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ನಡೆಸಲಾಗುತ್ತಿದೆ. ಹೀಗಾಗಿ ಈ ರೈಲುಗಳಲ್ಲಿ ಸಂಚರಿಸುವ ಎಲ್ಲಾ ಪ್ರಯಾಣಿಕರು ಅಧಿಕೃತವಾದ ಟಿಕೆಟ್ ಖರೀದಿಸಿ ಪ್ರಯಾಣಿಸುವಂತೆ ಕೆಆರ್ಸಿಎಲ್ ಅಧಿಕಾರಿಗಳು ವಿನಂತಿಸಿದ್ದಾರೆ.
ಟಿಕೆಟ್ ಖರೀದಿಸಿ ಪ್ರಯಾಣಿಸುವ ಮೂಲಕ ಕೆಆರ್ಸಿಎಲ್ನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಆಗುವ ಯಾವುದೇ ರೀತಿಯ ತೊಂದರೆಯನ್ನು ತಪ್ಪಿಸುವಂತೆ ರೈಲ್ವೆ ಅಧಿಕಾರಿಗಳು ವಿನಂತಿಸಿದ್ದಾರೆ. ಇನ್ನು ಮುಂದೆಯೂ ಕೊಂಕಣ ರೈಲ್ವೆಯ ಎಲ್ಲಾ ಮಾರ್ಗಗಳಲ್ಲೂ ಟಿಕೆಟ್ ತಪಾಸಣಾ ಪ್ರಕ್ರಿಯೆ ಯನ್ನು ಇನ್ನಷ್ಟು ತೀವ್ರವಾಗಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.






