ಕುಂದಾಪುರ: ಪ್ರಜಾಸೇವೆ ಆಂದೋಲನ ಸಭೆಯಲ್ಲಿ 103 ಅರ್ಜಿ ಸ್ವೀಕಾರ

ಉಡುಪಿ, ನ.28: ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿ ಯಲ್ಲಿ ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕುಂದಾಪುರ ಇವರ ವತಿಯಿಂದ ಪ್ರಜಾಸೇವೆ ಆಂದೋಲನ ಸಭಾವನ್ನು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಇಂದು ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಉದ್ಘಾಟಿಸಿದರು.
ದಿನವಿಡೀ ನಡೆದ ಸಭೆಯಲ್ಲಿ ಒಟ್ಟು ಸಭೆಯಲ್ಲಿ ಒಟ್ಟು 103 ಕ್ಕೂ ಅಧಿಕ ಅರ್ಜಿಗಳು ಸ್ವೀಕೃತವಾಗಿದವು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೊಡ್ಗಿ, ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಜಾಸೇವೆ ಆಂದೋಲನಮೂಲಕ ಇದುವರೆಗೆ ಸುಮಾರು 431 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಆದರೆ, ಈ ಪೈಕಿ ಎಷ್ಟು ಜನರ ಸಮಸ್ಯೆ ಗಳಿಗೆ ನೈಜವಾಗಿ ಪರಿಹಾರ ದೊರೆತಿದೆ ಎನ್ನುವುದು ಅತ್ಯಂತ ಮುಖ್ಯವಾಗಿದೆ ಎಂದರು.
ಜಿಲ್ಲೆಯ ಇಡೀ ಜಿಲ್ಲಾಡಳಿತವೇ ಗ್ರಾಮದೆಡೆಗೆ ಆಗಮಿಸಿರುವುದರಿಂದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಅಧಿಕಾರಿಗಳ ಮುಂದೆ ಹೇಳಿಕೊಳ್ಳಬೇಕು. ಇದರಿಂದ ಸಮಸ್ಯೆಗಳಿಗೆ ಯಾವುದಾದರೂ ರೂಪದಲ್ಲಿ ಪರಿಹಾರ ದೊರೆಯಬಹುದು ಎಂಬ ಆಶಯವಿದೆ. ಪ್ರತಿಯೊಂದು ಸಮಸ್ಯೆಯನ್ನೂ ತಕ್ಷಣವೇ ಬಗೆಹರಿಸಲು ಸಾಧ್ಯವಿಲ್ಲ. ಆದರೆ, ಸ್ಥಳದಲ್ಲಿಯೇ ಪರಿಹರಿಸಬಹುದಾದ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲು ಸಾಧ್ಯವಿದೆ ಎಂದರು.
ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮಾತನಾಡಿ, ಪ್ರಜಾಸೇವೆ ಆಂದೋಲನದ ಮೂಲಕ ತಾಲೂಕು ಆಡಳಿತವೇ ಜನರ ಬಳಿಗೆ ತೆರಳಿ ಸಾರ್ವಜನಿಕರ ಸಮಸ್ಯೆ ಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಕಾರ್ಯಕ್ಕೆ ಮುಂದಾಗಿದೆ. ಕಚೇರಿಗಳಿಗೆ ಅಲೆದಾಡುವ ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಅಧಿಕಾರಿಗಳನ್ನು ಭೇಟಿಯಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಲು ಇದರಿಂದ ಅವಕಾಶ ಲಭಿಸಿದೆ ಎಂದರು.
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಪ್ರಾಸ್ತಾವಿಕವಾಗಿ ಮಾತನಾಡಿ ಜನಸಾಮಾನ್ಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿ ಗಳಿಗೆ ಗ್ರಾಮಾಂತರ ಪ್ರದೇಶದಿಂದ ಬಂದು ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರಜಾ ಸೇವಾ ಆಂದೋಲನ ಸಭೆಗಳ ಮೂಲಕ ಸರ್ಕಾರ ಜನರ ಮನೆ ಬಾಗಿಲಿಗೆ ಬಂದು ಸಮಸ್ಯೆ ಆಲಿಸಲಿದೆ. ಜನರು ಇದರ ಸದುಪಯೋಗಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಸಹಾಯಕ ಆಯುಕ್ತ ಮಹೇಶ್ ಎನ್, ಎಎಸ್ಪಿ ಸುಧಾಕರ ನಾಯ್ಕ, ಆಡಳಿತಾಧಿಕಾರಿ ಮಹಾಬಲ ನಾಯ್ಕ, ಕುಂದಾಪುರ ಉಪ- ವಿಭಾಗದ ಸಹಾ ಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ಸೋಮನಾಥ ವಿಭೂತಿ, ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಂ.ಶಂಕರ್, ಕೋಟ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಪ್ರವೀಣ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ ತಹಶೀಲ್ದಾರ್ ಪ್ರದೀಪ ಕುರುಡೇಕರ್ ಸ್ವಾಗತಿಸಿ, ಡೆಪ್ಯೂಟಿ ತಹಶೀಲ್ದಾರ್ ವಿನಯ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.






