ಕ್ಯಾನ್ಸರ್ ಜಾಗೃತಿಗಾಗಿ ಮಣಿಪಾಲ - ಉಡುಪಿ ಬೈಕ್ ರ‍್ಯಾಲಿ

ಉಡುಪಿ, ಫೆ.4: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಆಶ್ರಯದಲ್ಲಿ ಮಣಿಪಾಲ ಆಟೋ ಕ್ಲಬ್, ಉಡುಪಿ ಜಾವಾ-ಎಜ್‌ಡಿ ಮೋಟಾರ್ ಸೈಕಲ್ ಕ್ಲಬ್, ರಾಯಲ್ ಎಮ್‌ಫೀಲ್ಡ್ ರೈಡರ್ಸ್ ಉಡುಪಿ ಹಾಗೂ ಆಭರಣ ಮೋಟಾರ್ಸ್ ಉಡುಪಿ ಇವುಗಳ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೈಕ್ ರಾಲಿಯನ್ನು ಬುಧವಾರ ಆಯೋಜಿಸಲಾಗಿತ್ತು.
ಜಾಥಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಚಾಲನೆ ನೀಡಿದರು. ಬೈಕ್ ಸವಾರರು ಹಾಗೂ ಆರೋಗ್ಯ ವೃತ್ತಿಪರರ ಸಕ್ರಿಯ ಭಾಗವಹಿಸುವಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳಲ್ಲಿ ಶಿಸ್ತು, ಸುರಕ್ಷಿತ ವಾಹನ ಚಾಲನೆ ಹಾಗೂ ಸಮುದಾಯದ ಸಹಕಾರ ಅತ್ಯಂತ ಮಹತ್ವ ಎಂದರು.
ಮುಖ್ಯ ಅತಿಥಿಗಳಾಗಿ ಮಣಿಪಾಲ ಹೆಲ್ತ್ ಎಂಟರ್ಪ್ರೈಸಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಪ್ ಜೋಸ್, ಮಣಿಪಾಲ ಕ್ಲಸ್ಟರ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಧಾಕರ್ ಕಂಟಿಪುಡಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಹಾಗೂ ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ವೈದ್ಯಕೀಯ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ.ಅನಂತ್ ಪೈ ವಿಶ್ವ ಕ್ಯಾನ್ಸರ್ ದಿನದ ಮಹತ್ವದ ಕುರಿತು ಮಾಹಿತಿ ನೀಡಿದರು. ಜಾಥವು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಿಂದ ಹೊರಟು ಉಡುಪಿ ಮುಖ್ಯ ರಸ್ತೆಯ ಮೂಲಕ ಕಿನ್ನಿಮುಲ್ಕಿ ಸ್ವಾಗತ ಗೋಪುರದವರೆಗೆ ಸಾಗಿ, ವಾಪಾಸ್ಸು ಕಸ್ತೂರ್ಬಾ ಆಸ್ಪತ್ರೆಗೆ ಸಾಗಿ ಬಂತು. ಈ ಬೈಕ್ ರಾಲಿಯಲ್ಲಿ 100ಕ್ಕೂ ಹೆಚ್ಚು ಬೈಕ್ ಸವಾರರು ಪಾಲ್ಗೊಂಡಿದ್ದರು.






