ಅಸ್ಪೃಶ್ಯತೆ ನಿವಾರಣೆಗೆ ನಾರಾಯಣ ಗುರುಗಳಿಂದ ದೊಡ್ಡ ಕ್ರಾಂತಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವಿತಾವಧಿಯಲ್ಲಿ ತಾಂಡವ ಆಡುತ್ತಿದ್ದ ಮೇಲು-ಕೀಳು, ಅಸ್ಪೃಶ್ಯತೆ ನಿವಾರಣೆಗೆ ಶ್ರಮವಹಿಸುವುದರೊಂದಿಗೆ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ, ಸಮಬಾಳು- ಸಮಪಾಲು ಲಭಿಸಬೇಕೆಂಬ ಪರಿಕಲ್ಪನೆಯೊಂದಿಗೆ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಬ್ರಹ್ಮಶ್ರೀ ನಾರಾಯಣ ಗುರು ದೊಡ್ಡ ಕ್ರಾಂತಿಯನ್ನೇ ಶಾಂತಿಮಾರ್ಗದಲ್ಲಿ ಮಾಡಿದ್ದರು ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಬಿಲ್ಲವರ ಸೇವಾ ಸಂಘ ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ಆಯೋಜಿಸಲಾದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದಾರ್ಶನಿಕ, ಆಧ್ಯಾತ್ಮಿಕ ಸಾಧಕರಾಗಿದ್ದ ನಾರಾಯಣ ಗುರುಗಳು ಸಮಾಜದಲ್ಲಿ ಸಮಾನತೆ ನಿರ್ಮಾಣಕ್ಕೆ ಮುಂದಾಗಿದ್ದರು. ಕೆಳವರ್ಗದ ಜನರಿಗಾಗಿ ದೇವಾಲಯಗಳನ್ನು ನಿರ್ಮಿಸಿ, ದೇವರನ್ನು ಪೂಜಿಸಲು ಅವಕಾಶ ಮಾಡಿಕೊಟ್ಟಿದ್ದರು. ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದರು. ಅಸ್ಪೃಶ್ಯತೆ, ಜಾತೀಯತೆ ಸೇರಿದಂತೆ ಸಾಮಾಜಿಕ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದ್ದರು ಎಂದರು.
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಸಮಾಜದ ಕಟ್ಟ ಕಡೆಯ ಜನರಿಗೂ ಮನ್ನಣೆ ನೀಡಿದ ನಾರಾಯಣ ಗುರುಗಳು, ಹಿಂದುಳಿದ ಸಮುದಾಯಕ್ಕೆ ಶಕ್ತಿ ತುಂಬಿದ್ದರು. ಸಮಾಜದ ಆರ್ಥಿಕ ಮತ್ತು ನೈತಿಕ ಅಧಃಪತನಕ್ಕೆ ದಾರಿ ಮಾಡಿಕೊಟ್ಟಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಸಮರ ಸಾರಿದರು. ನಾರಾಯಣ ಗುರುಗಳ ಸಿದ್ಧಾಂತವನ್ನು ಪಾಲಿಸುವುದರೊಂದಿಗೆ ಮುಂದಿನ ಪೀಳಿಗೆಯು ಅದನ್ನು ಮುಂದುವರೆಸಿಕೊಂಡು ಹೋಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಉಪನ್ಯಾಸಕ ಸಚೇಂದ್ರ ಅಂಬಾಗಿಲು ಉಪನ್ಯಾಸ ನೀಡಿ, ನಾರಾಯಣ ಗುರುಗಳ ಚಿಂತನೆಗಳು ಸಮಾಜ ಬದಲಾವಣೆಯಾಗಬೇಕೆಂಬ ಗುರಿ ಹೊಂದಿದ್ದವು. ಅವರ ಜೀವಿತಾವಧಿಯಲ್ಲಿ ಸಮಾಜದಲ್ಲಿ ಬೇರೂರಿದ್ದ ಜಾತೀಯತೆ, ಅಸಮಾನತೆಯ ಪಿಡುಗನ್ನು ಬುಡ ಸಮೇತ ಕಿತ್ತು ಹಾಕಲು ಆಧ್ಯಾತ್ಮಿಕ ಮಾರ್ಗವನ್ನು ಆಯ್ಕೆ ಮಾಡಿಕೊಂಡ ಇವರು, ಬಹು ವೇಗವಾಗಿ ಜನರಿಗೆ ಹತ್ತಿರವಾದರು ಎಂದರು.
ಅಸ್ಪೃಶ್ಯರಿಗೆ ದೇವಾಲಯ ಪ್ರವೇಶ, ಪೂಜೆಯ ಹಕ್ಕನ್ನು ನಿರಾಕರಿಸಿದ ಸಂದರ್ಭದಲ್ಲಿ, ದೇವಾಲಯಕ್ಕೆ ಹೋಗುವ ಹಕ್ಕು ನಿಮಗಿಲ್ಲವಾದರೆ ದೇವಾಲಯವನ್ನೇ ನಿಮ್ಮಲ್ಲಿಗೆ ತರುತ್ತೇನೆಂದು ಅವರುಗಳಿಗೆ ಪೂಜೆಯ ಹಕ್ಕನ್ನು ನೀಡಿದರು. ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯ ವಿರುದ್ಧ ಧೈರ್ಯದಿಂದ ಹೋರಾಡಿ, ಎಲ್ಲರಿಗೂ ಸಮಾನತೆ ಹಾಗೂ ಶಿಕ್ಷಣದ ಪ್ರಾಮುಖ್ಯತೆಯನ್ನು ಬೋಧಿಸಿದರು ಎಂದು ಅವರು ತಿಳಿಸಿದರು.
ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ನಾರಾಯಣ ಗುರುಗಳ ಕುರಿತ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯ ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್.ಕಾದ್ರೋಳ್ಳಿ, ಬಿಲ್ಲವರ ಸೇವಾ ಸಂಘ ಅಧ್ಯಕ್ಷ ಶಶಿಧರ ಎಂ.ಅಮೀನ್ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ತೇಜಸ್ ಎಂಬಂಗೇರ ನಿರೂಪಿಸಿ, ಇಲಾಖೆಯ ಸಿಬ್ಬಂದಿ ವರ್ಷಾ ವಂದಿಸಿದರು.






