ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಂಸದರಿಂದ ಪರಿಶೀಲನೆ

ಬ್ರಹ್ಮಾವರ, ಜ.16: ಇಲ್ಲಿನ ಮಹೇಶ್ ಆಸ್ಪತ್ರೆ ಎದುರಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸ್ಥಳೀಯ ಜನತೆಯ ಆಗ್ರಹದ ಮೇರೆಗೆ ನಡೆಯುತ್ತಿರುವ ಸರ್ವಿಸ್ ರಸ್ತೆಯ ಕಾಮಗಾರಿ ಪ್ರದೇಶಕ್ಕೆ ಇಂದು ಭೇಟಿ ನೀಡಿದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕಾಮಗಾರಿಯ ಗುಣಮಟ್ಟದ ಪರಿಶೀಲನೆ ನಡೆಸಿದರು.
ಸದ್ಯ ಇಲ್ಲಿ ಕಳೆದ ಕೆಲವು ದಿನಗಳಿಂದ ಮಹೇಶ್ ಆಸ್ಪತ್ರೆ ಎದುರಿನಿಂದ ಎಸ್‌ಎಂಎಸ್ ಪದವಿ ಪೂರ್ವಕಾಲೇಜು ಎದುರಿನವರೆಗೆ ಹೆದ್ದಾರಿಯ ಎರಡು ಬದಿಗಳಲ್ಲೂ ರಸ್ತೆ ಅಗಲೀಕರಣದೊಂದಿಗೆ ಸರ್ವಿಸ್ ರಸ್ತೆಯ ನಿರ್ಮಾಣ ಕಾರ್ಯ ನಡೆಯುತ್ತಿದೆ. ರಸ್ತೆಯ ಕಾಂಕ್ರೀಟಿಕರಣ ಕಳೆದ ಕೆಲವು ದಿನಗಳಿಂದ ನಡೆಯುತ್ತಿದೆ.
ಕೋಟದಿಂದ ಉಡುಪಿಗೆ ತೆರಳುವ ಮಾರ್ಗದಲ್ಲಿ ಇಂದು ಬೆಳಗ್ಗೆ ಕಾಮಗಾರಿ ಸ್ಥಳಕ್ಕೆ ಆಗಮಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಾಮಗಾರಿಗಳ ಗುಣಮಟ್ಟ, ಸಾರ್ವಜನಿಕರ ಸಂಚಾರಕ್ಕೆ ಉಂಟಾಗುವ ಅಡಚಣೆಗಳು ಹಾಗೂ ಸುರಕ್ಷತಾ ಕ್ರಮಗಳ ಕುರಿತು ಎನ್.ಎಚ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಸ್ಥಳೀಯವಾಗಿ ನಾಗರಿಕರಿಗೆ ಯಾವುದೇ ತೊಂದರೆ ಆಗದಂತೆ ಹಾಗೂ ಕಾಮಗಾರಿಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಸದರೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತ್ಯಾನಂದ ಬಿ.ಆರ್ ಹಾಗೂ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.







