ಉಡುಪಿಯಲ್ಲಿ ಪ್ರತ್ಯೇಕ ಡ್ರಗ್ಸ್ ನಿಯಂತ್ರಣ ದಳ ರಚನೆ: ಸಿಎಂಗೆ ಮನವಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ದಂಧೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ದಳವನ್ನು ರಚಿಸುವಂತೆ ಆಗ್ರಹಿಸಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ರಾಷ್ಟ್ರದಲ್ಲಿಯೇ ಶಿಕ್ಷಣ ವ್ಯವಸ್ಥೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಮಣಿಪಾಲ ಸಹಿತ ಉಡುಪಿ ಜಿಲ್ಲೆಯ ವಿವಿಧೆಡೆ ಡ್ರಗ್ಸ್ ಸೇವನೆಯಿಂದ ವಿದ್ಯಾರ್ಥಿಗಳು, ಯುವಜನತೆ ದಾರಿ ತಪ್ಪುತ್ತಿದ್ದಾರೆ. ಆದ್ದರಿಂದ ಪರಿಣಾಮಕಾರಿ ಯಾಗಿ ಡ್ರಗ್ಸ್ ದಂಧೆ ಯನ್ನು ನಿಯಂತ್ರಿಸಲು ಪ್ರತ್ಯೇಕ ವಿಶೇಷ ದಳವನ್ನು ರಚಿಸುವುದು ಅತ್ಯಗತ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದೇ ಸಂದರ್ಭದಲ್ಲಿ ಉಡುಪಿ ಕ್ಷೇತ್ರದ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿದ ಶಾಸಕರು, ಕ್ಷೇತ್ರದ ಕಡಲ್ಕೊರೆತ ತಡೆಗೋಡೆ ನಿರ್ಮಾಣ, ಕಿಂಡಿ ಅಣೆಕಟ್ಟು, ಸರಕಾರಿ ಶಾಲೆಗಳ ಅಭಿವೃದ್ಧಿ, ಹಾಸ್ಟೆಲ್ ಕಟ್ಟಡ ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರುಗೊಳಿ ಸಿದರೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.





