ಹಿರಿಯರ ಬದುಕನ್ನು ಹಸನುಗೊಳಿಸುವುದು ಎಲ್ಲರ ಕರ್ತವ್ಯ : ನ್ಯಾ. ಕಿರಣ್ ಗಂಗಣ್ಣವರ್
ಉಡುಪಿ: ಹಿರಿಯ ನಾಗರಿಕರ ದಿನಾಚರಣೆ
ಉಡುಪಿ, ಅ.1: ನಮ್ಮೆಲ್ಲರ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಿರಿಯ ನಾಗರಿಕರ ದಿನಾಚರಣೆಯು ಯುವಜನತೆಗೆ ಹಿರಿಯರ ಮಹತ್ವವನ್ನು ಮನದಟ್ಟು ಮಾಡುವುದರ ಜೊತೆಗೆ ಅವರ ಹಕ್ಕು ಮತ್ತು ಭದ್ರತೆಯ ಕುರಿತು ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಹೇಳಿದ್ದಾರೆ.
ನಗರದ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಮತ್ತು ಕೆನರಾ ಬ್ಯಾಂಕ್ನ ಉಡುಪಿ ಪ್ರಾದೇಶಿಕ ಕಛೇರಿ ವಲಯ 1 ಮತ್ತು 2ರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಮಾಜದಲ್ಲಿ ಹಿರಿಯ ನಾಗರಿಕರಿಗೆ ಅವರದ್ದೆ ಆದ ಗೌರವದ ಹಾಗೂ ಪೂಜನೀಯ ಸ್ಥಾನವಿದ್ದು, ಅವರನ್ನು ಪ್ರೀತಿ, ಸಹಾನುಭೂತಿಯಿಂದ ಕಾಣುವು ದರೊಂದಿಗೆ ಅವರ ಆರೈಕೆಯನ್ನು ತುಂಬುಹೃದಯದಿಂದ ಮಾಡಬೇಕು ಎಂದರು.
ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ಸರಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದೆ. ನ್ಯಾಯಾಲಯಗಳ ಪ್ರಕರಣಗಳಲ್ಲಿ ಸಹ ಅವರಿಗೆ ಮೊದಲ ಆದ್ಯತೆ ನೀಡಲಾಗುತಿದ್ದು, ಸರಿಯಾದ ರೀತಿಯಲ್ಲಿ ಅವುಗಳ ಪ್ರಯೋಜನವನ್ನು ಪಡೆದಾಗ ಮಾತ್ರವೇ ಹಿರಿಯ ನಾಗರಿಕರು ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ದಿಟ್ಟವಾಗಿ ಎದುರಿಸಿ ಗೌರವಯುತವಾಗಿ ಬದುಕಲು ಸಹಾಯವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಹಿರಿಯ ನಾಗರಿಕರು ಯಾರ ಮೇಲೂ ಅವಲಂಬಿತರಾಗದೇ ಸ್ವತಂತ್ರವಾಗಿ ಜೀವನ ನಡೆಸಲು ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸು ವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅವರಿಗಿರುವ ಹಕ್ಕು ಮತ್ತು ಕರ್ತವ್ಯ ಗಳನ್ನು ಅನುಭವಿಸುವ ಅವಕಾಶವನ್ನು ಅವರಿಗೆ ಕಲ್ಪಿಸಬೇಕು ಎಂದರು.
ಹಿರಿಯ ನಾಗರಿಕರು ಯಾವುದೇ ಕೆಲಸದ ನಿಮಿತ್ತ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಗೌರವದಿಂದ ಕಾಣುವುದರೊಂದಿಗೆ ಅವರಿಗೆ ಮೊದಲ ಆದ್ಯತೆ ನೀಡಬೇಕು ಎಂದ ಜಿಲ್ಲಾಧಿಕಾರಿಗಳು, ಅವರು ಹಿರಿಯ ನಾಗರಿಕರ ಗುರುತಿನ ಚೀಟಿ ಪಡೆಯದೇ ಇದ್ದಲ್ಲಿ ಕೂಡಲೇ ಪಡೆಯುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ಹಿರಿಯ ನಾಗರಿಕರಿಗಾಗಿ ಇತ್ತೀಚೆಗೆ ನಡೆದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮನು ಹಂದಾಡಿ ಅವರಿಂದ ನಕ್ಕು-ನಲಿ ವಿಶೇಷ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀ ನಾರಾಯಣ ಕಾರಂತ್,ಎಂಜಿಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ಎ, ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ಕುಮಾರ್, ಕೆನರಾ ಬ್ಯಾಂಕ್ನ ರೀಜನಲ್ ಮ್ಯಾನೇಜರ್ ಕಾರ್ತಿಕೇಯನ್, ವಿವಿಧ ಹಿರಿಯ ನಾಗರಿಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಹೆಚ್. ವಿಶ್ವನಾಥ್ ಸ್ವಾಗತಿಸಿದರೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಗಣನಾಥ್ ಎಕ್ಕಾರು ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ವಂದಿಸಿದರು.