ಉಡುಪಿ: ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ನಡಿಗೆ ಜಾಥಾ
ಉಡುಪಿ: ಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಉಡುಪಿ ನಗರಸಭೆಯು ಜಿಲ್ಲಾಡಳಿತ ಸಹಯೋಗದೊಂದಿಗೆ ನಗರದ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ನಿಂದ ಅಜ್ಜರಕಾಡಿನ ಪುರಭವನದವರೆಗೆ ನಡಿಗೆ ಜಾಥಾ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಜಾಥಾ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹಸಿರುನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಗರದ ಪ್ರಮುಖ ಬೀದಿಯ ಮೂಲಕ ಸ್ವಚ್ಛತಾ ನಡಿಗೆ ಜಾಥಾವು ಭುಜಂಗ ಪಾರ್ಕ್ನವರೆಗೆ ಸಾಗಿಬಂತು.
ಜಾಥಾದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್ಪಿ ಸಿದ್ದಲಿಂಗಪ್ಪ, ಪೌರಾಯುಕ್ತ ರಾಯಪ್ಪ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಡಿಡಿಪಿಐ ಗಣಪತಿ ಕೆ, ಕನ್ನಡ ಮತ್ತು ಸಂಸ್ಕೃತಿ ಇಲಾ ಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಅಲ್ಲದೇ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಜಾಥಾದೊಂದಿಗೆ ಹೆಜ್ಜೆಹಾಕಿದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ನ ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸ್ವಚ್ಛತೆಯ ಮಹತ್ವದ ಕುರಿತಂತೆ ಘೋಷ ವಾಕ್ಯಗಳನ್ನು ದಾರಿಯುದ್ದಕ್ಕೂ ಸಾರಿದರು.