ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಸ್ಮರಣ ಸಂಚಿಕೆ ಬಿಡುಗಡೆ

ಉಡುಪಿ, ಮಾ.25: ತೋನ್ಸೆ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ಸ್ಮರಣ ಸಂಚಿಕೆಯ ಮೂರನೇ ಆವೃತ್ತಿಯ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಉಡುಪಿ ಡಾ.ಟಿ.ಎಂ.ಎ.ಪೈ. ಬಿ.ಇಡ್ ಕಾಲೇಜಿನ ನಿವೃತ್ತ ಪ್ರಾಂಶು ಪಾಲ ಡಾ.ಮಹಾಬಲೇಶ್ವರ ರಾವ್ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು. ಬೋಧಕರು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಂಚಗ್ಯಾರಂಟಿ ಯೋಜನೆಯ ಬ್ರಹ್ಮಾವರ ತಾಲೂಕು ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಇದ್ರಿಸ್ ಹೂಡೆ ವಹಿಸಿದ್ದರು.
ಸಾಲಿಹಾತ್ ಶೈಕ್ಷಣಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಶಹನವಾಜ್ ಹಾಗೂ ಶಿಕ್ಷಣ ಸಂಸ್ಥೆಯ ವಿವಿಧ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಪ್ರಾಸ್ತಾವಿಕ ಮಾತು ಗಳನ್ನಾಡಿದರು. ಸುಮಯ್ಯ ಸ್ವಾಗತಿಸಿದರು. ಅರ್ಫಾನೂರ್ ವಂದಿಸಿದರು. ಉಮಾಮಾ ರಹಮತುಲ್ಲಾ ಕಾರ್ಯಕ್ರಮ ನಿರೂಪಿಸಿದರು.





