ಮಂಗಳೂರು ವಲಯ ತಾಂತ್ರಿಕ ವಿದ್ಯಾಲಯಗಳ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

ಉಡುಪಿ, ಎ.22: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇದರ 2025ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ವಿದ್ಯಾಲಯಗಳ ಪುರುಷರ ವಾಲಿಬಾಲ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದಲ್ಲಿ ಮಂಗಳವಾರ ಜರಗಿತು.
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಪ್ರೊ.ಡಾ. ರಾಧಕೃಷ್ಣ ಎಸ್.ಐತಾಳ್ ಮಾತನಾಡಿ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯಲ್ಲಿ ದೈಹಿಕ ಶಿಕ್ಷಣವು ಪ್ರಮುಖ ಪಾತ್ರವಹಿಸುತ್ತದೆ. ಕ್ರೀಡೆಯು ನಮ್ಮ ದೇಹದ ಸಧೃಡತೆಗೆ ಮತ್ತು ಉತ್ತಮ ಆರೋಗ್ಯಕ್ಕೆ ಸಹಾಯಕವಾಗಿದೆ. ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ಹೆಚ್ಚು ಹೆಚ್ಚು ತೊಡಗಿಸಿ ಕೊಳ್ಳಬೇಕೆಂದು ತಿಳಿಸಿದರು.
ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ವಹಿಸಿದ್ದರು. ಕಾಲೇಜಿನ ಉಪಪ್ರಾಂಶು ಪಾಲ ಡಾ.ಗಣೇಶ ಐತಾಳ್, ದೈಹಿಕ ಶಿಕ್ಷಣ ನಿರ್ದೇಶಕ ಪೌಲ್ ಸೂರಜ್ ಮತ್ತು ಶುಭಶ್ರೀ, ಡೀನ್‌ಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗಣಕ ಯಂತ್ರ ವಿಭಾಗದ ಸಹ ಪ್ರಾಧ್ಯಾಪಕಿ ಸೌಂದರ್ಯ ಅತಿಥಿಗಳನ್ನು ಪರಿಚಯಿಸಿದರು. ಪ್ರೀತಿ ಕಾರ್ಯಕ್ರಮ ನಿರೂಪಿಸಿದರು. ಈ ಪಂದ್ಯಾವಳಿ ಯಲ್ಲಿ ಮಂಗಳೂರು ವಲಯದ ವಿವಿಧ ತಾಂತ್ರಿಕ ಕಾಲೇಜುಗಳ 14 ತಂಡಗಳು ಭಾಗವಹಿಸಿದ್ದವು.







